ಫೆ.6: ‘ತುಳುಭಾಷಾ ಬೋಧನೆ ಅವಕಾಶಗಳು ಮತ್ತು ಸವಾಲುಗಳು’ ವಿಚಾರ ಸಂಕಿರಣ
ಮಂಗಳೂರು, ಫೆ.3: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ನಗರದ ಸಂತ ಅಲೋಶಿಯಸ್ ಕಾಲೇಜು ಸಹಕಾರದೊಂದಿಗೆ ‘ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತುಳುಭಾಷಾ ಬೋಧನೆ ಅವಕಾಶಗಳು ಮತ್ತು ಸವಾಲುಗಳು’ ಎಂಬ ವಿಷಯದ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರಿಗೆ ವಿಚಾರ ಸಂಕಿರಣವನ್ನು ಫೆ. 6 ರಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಸೀಮಿತಗೊಳಿಸಿ ತುಳುವನ್ನು ತೃತೀಯ ಭಾಷೆಯನ್ನಾಗಿ ಅಳವಡಿಸಲು ಸರಕಾರ ಆದೇಶಿಸಿದೆ. ಆದಾಗಿಯೂ ತುಳು ಕಲಿಕಾ ಯೋಜನೆ ಕೆಲವೇ ಕೇಂದ್ರ ಶಾಲೆಗಳಿಗೆ ಸೀಮಿತವಾಗಿದ್ದು, ಸಾಕಷ್ಟು ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ತುಳುವನ್ನು ತೃತೀಯ ಭಾಷೆಯನ್ನಾಗಿ ಕಲಿಯಲು ಉತ್ಸುಕತೆ ಹೊಂದಿದ್ದರೂ ಕೆಲವೊಂದು ತಾಂತ್ರಿಕ ಕಾರಣಗಳಿಂದ ಶಾಲೆಗಳಲ್ಲಿ ತುಳುವನ್ನು ತೃತೀಯ ಭಾಷೆಯನ್ನಾಗಿ ಜಾರಿ ಮಾಡಲು ಸಾಧ್ಯವಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ತುಳು ಭಾಷೆ, ಸಾಹಿತ್ಯ ಬೆಳವಣಿಗೆ ಹಾಗೂ ಅದರಲ್ಲಿ ಅಧ್ಯಾಪಕರ ಪಾತ್ರದ ಕುರಿತು ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರಿಗೆ ವಿಚಾರಸಂಕಿರಣವನ್ನು ನಡೆಸಲು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ನಿರ್ಧರಿಸಿದೆ.
ಫೆ. 6ರಂದು ಬೆಳಗ್ಗೆ 9:30ಕ್ಕೆ ಉದ್ಘಾಟನಾ ಸಮಾರಂಭವು ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೈ. ಶಿವರಾಮಯ್ಯ ಉದ್ಘಾಟಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ಫಾ. ಪ್ರವೀಣ್ ಮಾರ್ಟಿಸ್ ಮತ್ತು ಸಂತ ಅಲೋಶಿಯಸ್ ಕಾಲೇಜಿನ ಕುಲಸಚಿವ ಪ್ರೊ. ಎ.ಎಂ. ನರಹರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಸಂಪನ್ಮೂಲ ವ್ಯಕ್ತಿಯಾಗಿ ಜಾನಪದ ವಿದ್ವಾಂಸ ಡಾ.ಗಣನಾಥ್ ಎಕ್ಕಾರ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲ ಸಚಿವ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ಪ್ರಭಾಕರ್ ನೀರುಮಾರ್ಗ ಭಾಗವಹಿಸಲಿದ್ದು, ತುಳು ಪಠ್ಯ ಬೋಧನೆ ಕಾರ್ಯನುಷ್ಠಾನ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಅಪರಾಹ್ನ 1:30 ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ.ಎಲ್. ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ನಗರದ ಬೆಸೆಂಟ್ ಕಾಲೇಜಿನ ಕನ್ನಡ ಭಾಗದ ಮುಖ್ಯಸ್ಥೆ ಡಾ.ಮೀನಾಕ್ಷಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ತುಳು ಸಾತ್ಯ ಅಕಾಡಮಿಯ ಸದಸ್ಯ ದುರ್ಗಾ ಮೆನನ್ ಆರ್. ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಗಳ ಮುಖ್ಯೋಪಾಧ್ಯಾಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅಕಾಡಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಅವರು ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.