ದಾಸರ ಸಂಖ್ಯಾಶಾಸ್ತ್ರದ ಬಗ್ಗೆ ಅಧ್ಯಯನವಾಗಲಿ
ಉಡುಪಿ, ಫೆ.19: ದಾಸರು ಶಾಸ್ತ್ರೀಯವಾಗಿ ಹೇಳಿಕೊಟ್ಟಿರುವ ಸಂಖ್ಯಾಶಾಸ್ತ್ರದ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಬೇಕಾಗಿದೆ. ವಿದ್ಯಾರ್ಥಿಗಳು ಇದರ ಬಗ್ಗೆ ಸಂಶೋಧನೆ ನಡೆಸಿ ಡಾಕ್ಟರೇಟ್ ಪಡೆಯಬಹುದು ಎಂದು ಉಡುಪಿ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಆಶ್ರಯದಲ್ಲಿ ಯುಜಿಸಿ ಪ್ರಾಯೋಜಕತ್ವದಲ್ಲಿ ಕಾಲೇಜಿನ ಮಿನಿ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾದ ಸಂಖ್ಯಾಶಾಸ್ತ್ರದ ಕುರಿತ ಎರಡು ದಿನಗಳ ರಾಜ್ಯಮಟ್ಟದ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂಖ್ಯಾಶಾಸ್ತ್ರದ ಬುನಾದಿಯನ್ನು ಗಟ್ಟಿಗೊಳಿಸುವ ಕಾರ್ಯ ಅಗತ್ಯವಾಗಿ ಮಾಡಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಸಹಕಾರಿಯಾಗಲಿದೆ ಎಂದು ಅದಮಾರು ಶ್ರೀ ಹೇಳಿದರು.
ಮಣಿಪಾಲ ವಿವಿಯ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಡಾ.ಎನ್. ಶ್ರೀಕುಮಾರನ್ ನಾಯರ್ ದಿಕ್ಸೂಚಿ ಭಾಷಣ ಮಾಡಿ, ಭಾರತದಲ್ಲಿ ಸಂಖ್ಯಾ ಶಾಸ್ತ್ರದಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗಳಿದ್ದು, ಆ ನಿಟ್ಟಿನಲ್ಲಿ ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಿಗೆ ಸೂಕ್ತ ಅವಕಾಶ ಕಲ್ಪಿಸಬೇಕಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿ ಪ್ರದೀಪ್, ಕಾಲೇಜು ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಗದೀಶ್ ಶೆಟ್ಟಿ ವಹಿಸಿದ್ದರು. ಕಾಲೇಜಿನ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಗೋಪಾಲ್ ಎಂ. ಗೋಖಲೆ ಸ್ವಾಗತಿಸಿದರು. ಧನ್ಯಾ ವಂದಿಸಿದರು. ಉಪನ್ಯಾಸಕಿ ನಿಶಾ ಕಾರ್ಯಕ್ರಮ ನಿರೂಪಿಸಿದರು.