ಅಕ್ರಮ ಗಣಿಗಾರಿಕೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನಿಗೆ 15 ದಿನಗಳ ನ್ಯಾಯಾಂಗ ಬಂಧನ
ಶಶಿರಾಜ್ ಶೆಟ್ಟಿ
ಬೆಳ್ತಂಗಡಿ, ಮೇ 19: ಮೇಲಂತಬೆಟ್ಟು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದ ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ, ರೌಡಿ ಶೀಟರ್ ಶಶಿರಾಜ್ ಶೆಟ್ಟಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಮೇಲಂತಬೆಟ್ಟುವಿನಲ್ಲಿ ಶನಿವಾರ ಪೊಲೀಸರ ದಾಳಿಯ ವೇಳೆ ಸ್ಥಳದಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದವು. ಅಕ್ರಮವಾಗಿ ಸ್ಫೋಟಕ ದಾಸ್ತಾನು ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಶಶಿರಾಜ್ ಶೆಟ್ಟಿಯನ್ನು ಬಂಧಿಸಿದ್ದರು. ಆರೋಪಿಯನ್ನು ಇದೀಗ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿ ಬಿಜೆಪಿ ಮುಖಂಡ ಪ್ರಮೋದ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ
ಶಾಸಕರ ಪ್ರಯತ್ನ ವಿಫಲ:
ಶಶಿರಾಜ್ ಶೆಟ್ಟಿಯನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ ಬೆನ್ನಲ್ಲೇ ಶಾಸಕ ಹರೀಶ್ ಪೂಂಜಾ ಬೆಂಬಲಿಗರೊಂದಿಗೆ ಬೆಳ್ತಂಗಡಿ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಯನ್ನು ಹೊರತರುವ ಪ್ರಯತ್ನ ನಡೆಸಿದ್ದರು. ಠಾಣೆಯ ಮುಂದೆ ಧರಣಿ ನಡೆಸಿ ಪೊಲೀಸರ ಮೇಲೆ ಒತ್ತಡ ಹಾಕಲಾಗಿತ್ತು. ಆದರೆ ಯಾವುದೇ ಒತ್ತಡಗಳಿಗೆ ಮಣಿಯದ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಶಶಿರಾಜ್ ಶೆಟ್ಟಿಯ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.