ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಮಂಗಳೂರಿನಲ್ಲಿ ಮಾನವ ಸರಪಳಿ
ಮಂಗಳೂರು, ಸೆ.11: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅದ್ದೂರಿಯಾಗಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಪಾಲಿಕೆಯ ವ್ಯಾಪ್ತಿಯಲ್ಲಿ ಉತ್ತರದ ಪಾವಂಜೆ ನದಿಯಿಂದ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಸಾಗಿ, ನಂತೂರು ಜಂಕ್ಷನ್ ಪಡೀಲ್ ಜಂಕ್ಷನ್ ನಿಂದ ಸಾಗಿ ಕಣ್ಣೂರು ಜಂಕ್ಷನ್ ವರೆಗೆ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಗ್ಗೆ 9:30ಕ್ಕೆ ಸರ್ಕ್ಯೂಟ್ ಹೌಸ್ ನಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವ ನಮ್ಮ ಹೆಮ್ಮೆ. ಹಾಗಾಗಿ ಸಾರ್ವಜನಿಕರು, ಜನಪ್ರತಿನಿಧಿಗಳು, ಶಾಲಾ ಕಾಲೇಜು ಮಕ್ಕಳು ಇದರಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.
ಪಾಲಿಕೆ ವ್ಯಾಪ್ತಿಯ ಬೆಂಗರೆಯ ತೋಟಬೆಂಗ್ರೆಯಿಂದ ತಣ್ಣೀರು ಬಾವಿಯವರೆಗೆ 1000 ಗಿಡಗಳನ್ನ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಂದು ಸಾಂಕೇತಿಕವಾಗಿ ಇದಕ್ಕೆ ಚಾಲನೆ ನೀಡಲಾಗುವುದು ಎಂದು ಮೇಯರ್ ಹೇಳಿದರು.
ವಿವಿಧ ಇಲಾಖೆಗಳ ಸಹಯೋಗದೊಡನೆ ಮಾನವ ಸರಪಳಿ ರಚಿಸಿ. ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತದೆ. ಈ ಬಗ್ಗೆ ಸರಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಪ ಮೇಯರ್ ಸುನೀತಾ, ಸದಸ್ಯೆ ಜಯಶ್ರೀ ಕುಡ್ವ ಉಪಸ್ಥಿತರಿದ್ದರು.