ಮಂಗಳೂರು: ಎಂಡಿಎಂಎ ಮಾರಾಟ ಆರೋಪ; ಓರ್ವ ಸೆರೆ
ಮಂಗಳೂರು: ನಗರದ ಸಿಸಿಬಿ ಪೊಲೀಸರು ಫಳ್ನೀರ್ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ ಆಟೋ ರಿಕ್ಷಾದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿ, ಈ ಸಂಬಂಧ ಆರೋಪಿಯನ್ನು ಬಂಧಿಸಿ ಒಟ್ಟು 5,11,000 ರೂ ಮೌಲ್ಯದ ಸೊತ್ತು ವಶಕ್ಕೆ ತೆಗೆದುಕೊಂಡಿರುವ ಘಟನೆ ಗುರುವಾರ ನಡೆದಿರುವುದು ವರದಿಯಾಗಿದೆ.
ಬಜಾಲ್ನ ತೌಸೀಫ್ ಯಾನೆ ತೌಚಿ ( 23) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿ ಬಳಿಯಿಂದ 45 ಸಾವಿರ ರೂ. ಮೌಲ್ಯದ 9 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.
ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಶ್ರೀ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.