ಮಂಗಳೂರು: ವಿಶ್ವ ಸಾಕ್ಷರತಾ ದಿನಾಚರಣೆ
ಮಂಗಳೂರು: ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಜಿಪಂ, ಜಿಲ್ಲಾ ಸಾಕ್ಷರತಾ ಸಮಿತಿ, ಬಂಟ್ವಾಳ ತಾಪಂ ಹಾಗೂ ಜನ ಶಿಕ್ಷಣ ಟ್ರಸ್ಟ್ ನವ ಸಾಕ್ಷರರ ಗ್ರಾಮ ವಿಕಾಸ ಕೇಂದ್ರ ಗಳ ಸಹಭಾಗಿತ್ವದಲ್ಲಿ ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯ ಬೇಕು ಎಂಬ ನಿಟ್ಟಿನಲ್ಲಿ ಸರಕಾರವು 1991ರಲ್ಲಿ ಅನಕ್ಷರತೆ ನಿರ್ಮೂಲನೆಗಾಗಿ ಪಣತೊಟ್ಟು ಅನೇಕ ಆಂದೋಲನಗಳನ್ನು ನಡೆಸಿದೆ. ಸಾಕ್ಷರರು ತಮ್ಮಲ್ಲಿರುವ ಜ್ಞಾನವನ್ನು, ವಿದ್ಯೆಯನ್ನು ಅನಕ್ಷರಸ್ಥರಿಗೆ ನೀಡಿದಾಗ ಜಿಲ್ಲೆಯೂ ಸಂಪೂರ್ಣ ಸಾಕ್ಷ ರತಾ ಜಿಲ್ಲೆಯಾಗಿ ರೂಪುಗೊಳ್ಳಲು ಸಾಧ್ಯ ಎಂದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿದರು.
ಈ ಸಂದರ್ಭ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಬೆಂಗಳೂರಿಗೆ ವರ್ಗಾವಣೆಗೊಂಡ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ್‌ರಿಗೆ ಬೀಳ್ಕೊಡಲಾಯಿತು.
ಈ ಸಂದರ್ಭ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ್, ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ ಸಿ., ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ರಾಜಲಕ್ಷ್ಮಿಕೆ, ಬಂಟ್ವಾಳ ತಾಪಂ ಇಒ ಸಚಿನ್ ಕುಮಾರ್, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಫಾತಿಮಾ ಮತ್ತಿತರರು ಉಪಸ್ಥಿತರಿದ್ದರು.