ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸನ್ನದ್ಧರಾಗಲು ಅಧಿಕಾರಿಗಳಿಗೆ ಸಚಿವ ಗುಂಡೂರಾವ್ ಸೂಚನೆ
ಬೇಸಿಗೆಯಲ್ಲಿ ದ.ಕ. ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಉಸ್ತುವಾರಿ ಸಚಿವರಿಂದ ಸಭೆ
ಬೆಂಗಳೂರು, ಮಾ.2: ದ.ಕ. ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಪ್ರಸಕ್ತ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಆದರೂ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾದರೆ, ಅದನ್ನು ನಿಭಾಯಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಇದಕ್ಕೆ ಅನುಗುಣವಾಗಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿರುವ ವಿವಿಧ ಕಿರು ಅಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ತೃಪ್ತಿದಾಯಕವಾಗಿದೆ. ಕುಡಿಯುವ ನೀರಿನ ಸರಬರಾಜಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಗತ್ಯ ಬಿದ್ದರೆ ನೇತ್ರಾವತಿ ನದಿಯ ಎ.ಎಂ.ಆರ್. ಡ್ಯಾಂನಿಂದಲೂ ನೀರು ಪಡೆಯಬೇಕು. ಈ ನಿಟ್ಟಿನಲ್ಲಿ ಎಂ.ಆರ್.ಪಿ.ಎಲ್. ಮತ್ತು ಎಸ್ಇಝಡ್ ನಂತಹ ಜಿಲ್ಲೆಯ ಬೃಹತ್ ಕೈಗಾರಿಕೆಗಳು ಸಹಕರಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಚಿವರು ಸ್ಪಷ್ಟವಾಗಿ ಹೇಳಿದರು.
ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು ಎಂದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ ಬರ ಪರಿಹಾರ ನಿಧಿಯಲ್ಲಿ 3 ಕೋಟಿ ರೂಪಾಯಿ ಅನುದಾನ ಇದೆ. ಅಗತ್ಯ ಬಿದ್ದರೆ ಇನ್ನಷ್ಟು ನೆರವು ನೀಡಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಆನಂದ್ ಮತ್ತಿತರರು ಇದ್ದರು.