ನ.19ರಂದು ಯಕ್ಷಗಾನ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪ್ರದಾನ
ಮಂಗಳೂರು, ನ.16: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ, ದಿ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ ನ.19 ರಂದು ನಡೆಯಲಿದೆ.
ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ ನೀಡಿ, ಸಂಜೆ 4.30ಕ್ಕೆ ಮಂಗಳೂರಿನ ಉರ್ವಸ್ಟೋರ್ ಬಳಿಯ ಅಂಬೇಡ್ಕರ್ ಭವನದಲ್ಲಿ ಸಮಾರಂಭ ನಡೆಯಲಿದೆ ಎಂದರು.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಪ್ರಶಸ್ತಿ ಪ್ರದಾನ ಮಾಡುವರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಶಸ್ತಿ ಪುರಸ್ಕೃತರ ಕಿರುಪರಿಚಯ ಪುಸ್ತಕ ಬಿಡುಗಡೆ ಮಾಡುವರು. ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸುವರು. ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಪ್ರಾಸ್ತಾವಿಕ ನುಡಿಯನ್ನು ಮಾತನಾಡುವರು. ಮುಖ್ಯಅತಿಥಿಗಳಾಗಿ ಜನಪ್ರತಿನಿಧಿಗಳು, ವಿವಿಧ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು, ನಿಗಮ ಮಂಡಳಿ ಅಧ್ಯಕ್ಷರು ಸಹಿತ ಮತ್ತಿತರರು ಭಾಗವಹಿಸುವರು ಎಂದರು.
ಪ್ರಶಸ್ತಿ ಪ್ರದಾನ
2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಯನ್ನು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ನೀಡಲಾಗುವುದು. ಗೌರವ ಪ್ರಶಸ್ತಿಗೆ ದಿನೇಶ್ ಅಮ್ಮಣ್ಣಾಯ, ನಾರಾಯಣಪ್ಪ ಎ.ಆರ್., ಜಬ್ಬಾರ್ ಸಮೋ, ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಚೆನ್ನಪ್ಪ ಗೌಡ ಸಜಿಪ ಅವರು ಆಯ್ಕೆಯಾಗಿದ್ದಾರೆ. ಯಕ್ಷಸಿರಿ ಪ್ರಶಸ್ತಿಯನ್ನು ರಘುನಾಥ ಶೆಟ್ಟಿ ಬಾಯಾರು, ದಿವಾಕರ ದಾಸ ಕಾವಳಕಟ್ಟೆ, ಸುಬ್ರಾಯ ಪಾಟಾಳಿ ಸಂಪಾಜೆ, ನರಾಡಿ ಭೋಜರಾಜ ಶೆಟ್ಟಿ, ಸದಾನಂದ ಪ್ರಭು, ಹೊಳೆಮಗೆ ನಾಗಪ್ಪ ಮರಕಾಲ, ಶಿರಳಗಿ ತಿಮ್ಮಪ್ಪ ಹೆಗಡೆ, ಬಾಬು ಕುಲಾಲ್ ಹಳ್ಳಾಡಿ, ಶಿವಯ್ಯ, ಜೀಯಪ್ಪ ಅವರು ಆಯ್ಕೆಯಾಗಿದ್ದಾರೆ. ದಿ.ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಅವರ ಹೆಸರಿನಲ್ಲಿ ನೀಡುವ ದತ್ತಿನಿಧಿ ಪ್ರಶಸ್ತಿಯನ್ನು ಗೋಪಾಲಕೃಷ್ಣ ಶಂಕರ ಭಟ್ ಜೋಗಿಮನೆ ಹಾಗೂ 2022 ಮತ್ತು 20233ನೇ ಸಾಲಿನ ಪುಸ್ತಕ ಬಹುಮಾನ ವಿದ್ವಾನ್ ಗಣಪತಿ ಭಟ್, ಡಾ. ಮನೋರಮಾ ಬಿ.ಎನ್., ಡಾ.ಸತೀಶ್ ಜಿ.ನಾಯ್ಕ, ಎಚ್.ಸುಜಯೀಂದ್ರ ಹಂದೆ ಹಾಗೂ 2021ನೇ ಸಾಲಿನ ಪುಸ್ತಕ ಬಹುಮಾನ ಪುರಸ್ಕೃತರಾದ ಪೊಳಲಿ ನಿತ್ಯಾನಂದ ಕಾರಂತ ಅವರು ಪ್ರಶಸ್ತಿ ಸ್ವೀಕರಿಸಲಿರುವರು ಎಂದು ಹೇಳಿದರು.
ಯಕ್ಷಗಾನ ಪ್ರದರ್ಶನ
ಮಧ್ಯಾಹ್ನ 2 ಗಂಟೆಗೆ ವಿಶೇಷ ಆಕರ್ಷಣೆಯಾಗಿ ಹೆಸರಾಂತ ಕಲಾವಿದರಿಂದ ದಿ.ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ಮಾನಿಷಾದದ ಭಾಗ ‘ಸೀತಾ ಪರಿತ್ಯಾಗ’ ಯಕ್ಷಗಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ ಸತೀಶ್ ಅಡಪ, ರಾಜೇಶ್ ಕುಳಾಯಿ, ವಿಜಯಕುಮಾರ್ ಶೆಟ್ಟಿ, ಕೃಷ್ಣಪ್ಪ ಪೂಜಾರಿ ಕಿನ್ಯಾ, ಗುರುರಾಜ ಭಟ್, ಕೊಪ್ಪಲ ಮೋಹನ ಕದ್ರಿ ಉಪಸ್ಥಿತರಿದ್ದರು.