ಸೆ.9: ರಾಷ್ಟ್ರೀಯ ಲೋಕ್ ಅದಾಲತ್
ಮಂಗಳೂರು,ಸೆ.1: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದ.ಕ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಸೆ.9ರಂದು ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ, ಸುಳ್ಯ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಲೋಕ್‌ಅದಾಲತ್ ಆಯೋಜಿಸಿದೆ.
ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದಿರುವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಿಗೆ ರಾಜಿ ಸಂಧಾನದ ಮೂಲಕ ಅತೀ ಶೀಘ್ರವಾಗಿ ಪರಿಹಾರ ಕಂಡುಕೊಳ್ಳಲು ಈ ಅದಾಲತನ್ನು ಬಳಸಬಹುದಾಗಿದೆ.
ಮೋಟರು ವಾಹನ ಅಪಘಾತ ಪ್ರಕರಣಗಳು, ಚೆಕ್ಕು ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಛೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣಗಳು, ವೇತನ ಭತ್ತೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಾತ್ಮಕವಾಗಿ ರಾಜಿಯಾ ಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಬಹುದು.
ಅದಾಲತ್‌ನಲ್ಲಿ ನ್ಯಾಯಾಧೀಶರು ಹಾಗೂ ಸಂಬಂಧಪಟ್ಟ ಪ್ರಕರಣಗಳ ವಿವಿಧ ಇಲಾಖೆ ಮಧ್ಯಸ್ಥಿಕೆ ವಹಿಸುತ್ತಾರೆ. ಇಬ್ಬರು ಪಕ್ಷಗಾರರು ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನವನ್ನು ನೀಡಲಾಗುವುದು. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು ಹಾಗೂ ಈ ಆದೇಶದ ವಿರುದ್ಧ ಯಾವುದೇ ಮೇಲ್ಮನವಿ ಇರುವುದಿಲ್ಲ. ಕಡಿಮೆ ಖರ್ಚಿನಲ್ಲಿ ತ್ವರಿತ ನ್ಯಾಯ ಪಡೆದುಕೊಂಡು ಸಮಯ ಹಾಗೂ ಸಂಬಂಧಗಳನ್ನು ಉಳಿಸಿಕೊಳ್ಳಲು ಈ ಅದಾಲತ್ ಅವಕಾಶ ನೀಡಲಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂ: 0824-2448111 ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಆಯಾ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.