ಶಕ್ತಿ ನಗರ: ಶಕ್ತಿ ಪೂರ್ವ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ
ಮಂಗಳೂರು, ಅ.27: ಶಕ್ತಿ ನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆ ಆವರಣದಲ್ಲಿ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಹೊಸ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್ ಮತ್ತು ಕಾರ್ಕಳ ಜ್ಞಾನ ಸುಧಾ ಸಂಸ್ಥೆಯ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರು ಜಗತ್ತಿನಲ್ಲಿ ಪ್ರತ್ಯೇಕ ಅಸ್ತಿತ್ವವನ್ನು ಹೊಂದಿದ್ದಾರೆ. ಆದ್ದರಿಂದ ಕೀಳರಿಮೆ ತೊರೆದು ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಕ್ತಿ ಎಜುಕೇಶನ್ ಟ್ರಸ್ಟ್ ಆಡಳಿತಾಧಿಕಾರಿ ಡಾ.ಕೆ.ಸಿ.ನಾಯ್ಕ್ ಮಾತನಾಡಿ, 2016ರಲ್ಲಿ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲಾಗಿದೆ. ಪ್ರಸಕ್ತ ಶಕ್ತಿ ಸಮೂಹ ಸಂಸ್ಥೆಯಲ್ಲಿ 1500ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳಿಗೆ ದೇಶದ ಉನ್ನತ ಪರಂಪರೆ ಶಿಕ್ಷಣದ ಮೂಲಕ ದೊರೆಯುವಂತಾಗಬೇಕು ಎಂದು ಸಂಸ್ಥೆಗೆ ಸಹಕರಿಸಿದವರನ್ನು ಸ್ಮರಿಸಿದರು.
ಶಕ್ತಿ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಸಂಜೀತ್ ನಾಯ್ಕ್ ಮಾತನಾಡಿ, ಅನೇಕ ಜನರ ಸಹಕಾರದಿಂದ ಸಂಸ್ಥೆ ಬೆಳೆದಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರಿಗೆ ಭವಿಷ್ಯದಲ್ಲಿ ಉತ್ತಮ ಜೀವನ ಕಲ್ಪಿಸುವ ಗುರಿಯೊಂದಿಗೆ ಸಂಸ್ಥೆ ಮುನ್ನಡೆಯುತ್ತಿದೆ ಎಂದರು.
ಸಂಸ್ಥೆಯ ಟ್ರಸ್ಟಿ ಸಗುಣಾ ಸಿ. ನಾಯ್ಕ್, ಟ್ರಸ್ಟಿ ಡಾ.ಮುರಳೀಧರ ನಾಯ್ಕ್, ಶಕ್ತಿ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಎಚ್., ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲ ರವಿಶಂಕರ್ ಹೆಗಡೆ, ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಸಂಯೋಜಕಿ ಪೆಟ್ರಿಶಿಯಾ ರೋಸ್ ಪಿಂಟೊ ಉಪಸ್ಥಿತರಿದ್ದರು. ಶಕ್ತಿ ಶಿಕ್ಷಣ ಟ್ರಸ್ಟ್ ಸಲಹೆಗಾರ ರಮೇಶ್ ಕೆ. ಸ್ವಾಗತಿಸಿದರು. ಉಪನ್ಯಾಸಕಿ ಅಕ್ಷತಾ ವಂದಿಸಿದರು. ಉಪನ್ಯಾಸಕಿ ಚೈತ್ರಾ ಕಾರ್ಯಕ್ರಮ ನಿರೂಪಿಸಿದರು.