ಛತ್ತೀಸ್ ಗಢ | ಭದ್ರತಾ ಪಡೆ-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ : 16 ಮಾವೋವಾದಿಗಳ ಹತ್ಯೆ

ಸಾಂದರ್ಭಿಕ ಚಿತ್ರ (PTI)
ಸುಕ್ಮಾ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಕಾಳಗದಲ್ಲಿ ಕನಿಷ್ಠ ಪಕ್ಷ 16 ಮಾವೋವಾದಿಗಳು ಹತರಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ ಭದ್ರತಾ ತಂಡಗಳ ಜಂಟಿ ತಂಡವು ಮಾವೋವಾದಿ ನಿಗ್ರಹ ಕಾರ್ಯಾಚರಣೆಗೆ ತೆರಳಿದ್ದಾಗ, ಕೇರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಗಳು ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇರ್ಲಾಪಾಲ್ ಪ್ರದೇಶದಲ್ಲಿ ಮಾವೋವಾದಿಗಳು ಅಡಗಿದ್ದಾರೆ ಎಂಬ ಗುಪ್ತಚರ ಮಾಹಿತಿಗಳನ್ನು ಆಧರಿಸಿ, ಜಿಲ್ಲಾ ಮೀಸಲು ಪಡೆ ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿಗಳು ಈ ಜಂಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಅವರು ಹೇಳಿದ್ದಾರೆ.
"ಎನ್ಕೌಂಟರ್ ನಡೆದ ಸ್ಥಳದಿಂದ ಇಲ್ಲಿಯವರೆಗೆ 16 ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ" ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಪಡೆಗಳ ಸಿಬ್ಬಂದಿಗಳೂ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.