ಮಹಿಳಾ ಕಾನ್ಸ್ಟೇಬಲ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಡೆತ್ ನೋಟ್ ನಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿ 30 ವರ್ಷದ ಮಹಿಳಾ ಕಾನ್ಸ್ಟೇಬಲ್ ಒಬ್ಬರು ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಕಾನ್ಸ್ಟೇಬಲ್ ಅರ್ಚನಾ ಕುಮಾರಿ ಮೃತಪಟ್ಟವರು. ಅವರನ್ನು ಜಿಲ್ಲಾ ಪೊಲೀಸ್ ಮುಖ್ಯ ಕಾರ್ಯಾಲಯದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
ಮೃತದೇಹ ಪತ್ತೆಯಾದ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ತಾನು ಮತ್ತು ತನ್ನ ಪತಿಗೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆಂದು ಅರ್ಚನಾ ಅವರು ಆರೋಪಿಸಿದ್ದಾರೆ.
‘‘ಬುಧವಾರ ಬೆಳಗ್ಗೆ 10 ಗಂಟೆಯ ವೇಳೆಗೆ ಆಕೆ ಕರ್ತವ್ಯದಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆಕೆಯ ಮೃತದೇಹವು ಸೀಲಿಂಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿರುವುದು ಪತ್ತೆಯಾಗಿತ್ತು. ಕೂಡಲೇ ಆಕೆಯನ್ನು ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಕೆ ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ’’ ಎಂದು ಪೊಲೀಸ್ ಅಧೀಕ್ಷಕ ಅಮಿತ್ ಕುಮಾರ್ ತಿಳಿಸಿದ್ದಾರೆ.
ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. ಎಲ್ಲಾ ಕೋನಗಳಿಂದಲೂ ಆಕೆಯ ಸಾವಿನ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಮಿತ್ ಕುಮಾರ್ ತಿಳಿಸಿದ್ದಾರೆ.