ಭಾವಿ ಪತಿ ಜತೆ ಸುತ್ತಾಡಲು ಹೋಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ರಾಂಚಿ: ಭಾವಿ ಪತಿ ಜತೆ ಸುತ್ತಾಡಲು ತೆರಳಿದ್ದ 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಜಾರ್ಖಂಡ್ ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಿಂದ ವರದಿಯಾಗಿದೆ.
ಮುಫಾಸ್ಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬರಿಜಾಲ್ ಗ್ರಾಮದಲ್ಲಿ ಗುರುವಾರ ಸಂಜೆ ಈ ಜೋಡಿ ಅಡ್ಡಾಡಲು ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕೆ ಆಕೆಯ ಬ್ಯಾಗ್ ಹಾಗೂ ಮೊಬೈಲ್ ಫೋನ್ ಕಿತ್ತುಕೊಂಡು ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.
ಭಾವಿ ಪತಿ ಹೇಗೋ ಆರೋಪಿಗಳಿಂದ ತಪ್ಪಿಸಿಕೊಂಡು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ನೆರವಿಗೆ ಧಾವಿಸಿದ ಪೊಲೀಸರು ಯುವತಿಯನ್ನು ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ಕರೆದೊಯ್ದರು ಎಂದು ಎಸ್ಪಿ ಅಶುತೋಶ್ ಶೇಖರ್ ಹೇಳಿದ್ದಾರೆ.
ಮಹಿಳೆ ನೀಡಿದ ಸುಳಿವಿನ ಮೇರೆಗೆ ಕಿಟಗುತ್ತು ಗ್ರಾಮದ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ಬ್ಯಾಗ್ ಮತ್ತು ಮೊಬೈಲ್ ಕೂಡಾ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ.