ನಾನು ತಲೆಮರೆಸಿಕೊಂಡಿಲ್ಲ, ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ: ದಿಲ್ಲಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಆಪ್ ಶಾಸಕ ಅಮಾನತುಲ್ಲಾ ಖಾನ್

ಅಮಾನತುಲ್ಲಾ ಖಾನ್ (PTI)
ಹೊಸದಿಲ್ಲಿ: ಆಪ್ ಶಾಸಕ ಅಮಾನತುಲ್ಲಾ ಖಾನ್ ರನ್ನು ಬಂಧಿಸಲು ದಿಲ್ಲಿ ಪೊಲೀಸರು ತಮ್ಮ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಬೆನ್ನಿಗೇ, ದಿಲ್ಲಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಅಮಾನತುಲ್ಲಾ ಖಾನ್, ನಾನು ತಲೆಮರೆಸಿಕೊಂಡಿಲ್ಲ ಹಾಗೂ ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯೊಬ್ಬನನ್ನು ಬಂಧಿಸಲು ತೆರಳಿದ್ದ ಪೊಲೀಸರಿಗೆ ಅಡ್ಡಿ ಪಡಿಸಿದ ಅರೋಪದ ಮೇಲೆ ತಮ್ಮ ವಿರುದ್ಧ ಪ್ರಕರಣ ದಾಖಲಾದ ನಂತರ, ಓಖ್ಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಮಾನತುಲ್ಲಾ ಖಾನ್, ದಿಲ್ಲಿ ಪೊಲೀಸ್ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಮೇಲಿನಂತೆ ದೂರಿದ್ದಾರೆ.
ಇತ್ತೀಚೆಗೆ ನಡೆದ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಓಖ್ಲಾ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಅಮಾನತುಲ್ಲಾ ಖಾನ್, “ನಾನು ನನ್ನ ವಿಧಾನಸಭಾ ಕ್ಷೇತ್ರದಲ್ಲೇ ಇದ್ದೇನೆ. ನಾನು ಬಚ್ಚಿಟ್ಟುಕೊಂಡಿಲ್ಲ. ಪೊಲೀಸರು ಬಂಧಿಸಲು ಬಂದಿದ್ದ ವ್ಯಕ್ತಿಯು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ. ಪೊಲೀಸರು ತಮ್ಮ ತಪ್ಪನ್ನು ಮುಚ್ಚಿಟ್ಟುಕೊಳ್ಳಲು ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿದ್ದಾರೆ” ಎಂದು ದಿಲ್ಲಿ ಪೊಲೀಸ್ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಆರೋಪಿಸಿದ್ದಾರೆ.
ಈ ನಡುವೆ, ಅಮಾನತುಲ್ಲಾ ಖಾನ್ ರನ್ನು ಬಂಧಿಸಲು ದಿಲ್ಲಿ ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ದಿಲ್ಲಿಯ ಹತ್ತಾರು ಪ್ರದೇಶಳಲ್ಲದೆ, ರಾಜಸ್ಥಾನ ಹಾಗೂ ಉತ್ತರ ಪ್ರದೇಶಗಳಲ್ಲಿ ಪೊಲೀಸರು ಹಾಗೂ ವಿಶೇಷ ಘಟಕ ತಂಡಗಳು ಜಂಟಿ ದಾಳಿ ನಡೆಸಿದವು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ನಾಯಕ ಅಮಾನತುಲ್ಲಾ ಖಾನ್ ವಿರುದ್ಧ ದೂರು ದಾಖಲಾಗುತ್ತಿದ್ದಂತೆಯೆ ಅವರ ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಆಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.
ಯಾರದೇ ಹೆಸರನ್ನು ಉಲ್ಲೇಖಿಸದೆ, ಕೆಲವು ವ್ಯಕ್ತಿಗಳು ಅಮಾನತುಲ್ಲಾ ಖಾನ್ ಬಚ್ಚಿಟ್ಟುಕೊಳ್ಳಲು ನೆರವು ನೀಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸರನ್ನು ತಳ್ಳಿದ ಹಾಗೂ ಅವರಿಗೆ ಬೆದರಿಕೆ ಒಡ್ಡಿದ ಆರೋಪಗಳನ್ನು ಓಖ್ಲಾ ಶಾಸಕ ಅಮಾನತುಲ್ಲಾ ಖಾನ್ ಎದುರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.