ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು: ಡಿ. 11ರಂದು ಸುಪ್ರೀಂ ಕೋರ್ಟ್ ತೀರ್ಪು
ಸುಪ್ರೀಂ ಕೋರ್ಟ್ | Photo: PTI
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ನೀಡಲಿದೆ.
ಕೇಂದ್ರ ಸರಕಾರವು 2019 ಆಗಸ್ಟ್ 5ರಂದು ಆದೇಶವೊಂದನ್ನು ಹೊರಡಿಸಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು.
ಸರಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 20ಕ್ಕೂ ಅಧಿಕ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ನೇತೃತ್ವದ ಹಾಗೂ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನ, ಬಿ.ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಸಂವಿಧಾನ ಪೀಠವು ಸೆಪ್ಟಂಬರ್ 5ರಂದು ತೀರ್ಪನ್ನು ಕಾದಿರಿಸಿತ್ತು.
ಅರ್ಜಿಗಳ ವಿಚಾರಣೆಯು ಆಗಸ್ಟ್ 2ರಂದು ಆರಂಭವಾಗಿತ್ತು ಹಾಗೂ 16 ದಿನಗಳ ಕಾಲ ನಡೆಯಿತು. ವಿಚಾರಣೆಯ ವೇಳೆ, ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಸರಕಾರದ ನಿರ್ಧಾರದ ಸಾಂವಿಧಾನಿಕ ಸಿಂಧುತ್ವ, ಜಮ್ಮು ಮತ್ತು ಕಾಶ್ಮೀರ ಪುನರ್ರಚನೆ ಕಾಯ್ದೆಯ ಸಿಂಧುತ್ವ, 2018ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹೇರಲಾದ ರಾಜ್ಯಪಾಲರ ಆಳ್ವಿಕೆ ಮತ್ತು ಆರು ತಿಂಗಳ ಬಳಿಕ ರಾಜ್ಯದಲ್ಲಿ ಹೇರಲಾದ ರಾಷ್ಟ್ರಪತಿ ಆಡಳಿತ ಸೇರಿದಂತೆ ಹಲವು ವಿಷಯಗಳ ಬಗ್ಗೆ ನ್ಯಾಯಾಲಯವು ವಾದ ಪ್ರತಿವಾದಗಳನ್ನು ಆಲಿಸಿತು.