ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳು ಯಾವುದೇ ಕ್ಷೇತ್ರವನ್ನು ಕಳೆದುಕೊಳ್ಳುವುದಿಲ್ಲ : ಗೃಹ ಸಚಿವ ಅಮಿತ್ ಶಾ

ಅಮಿತ್ ಶಾ | PTI
ಚೆನ್ನೈ: ಕೇಂದ್ರ ಸರಕಾರ ಕೈಗೊಳ್ಳಲಿರುವ ಕೇತ್ರಗಳ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯತೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕೊಯಮತ್ತೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, 2026ರಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳು ಅನುಪಾತದ ಆಧಾರದ ಮೇಲೆ ಹೆಚ್ಚುವರಿ ಕ್ಷೇತ್ರಗಳನ್ನು ಪಡೆಯಲಿವೆ. ಆದರೆ, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದರು.
ಸ್ಟಾಲಿನ್ ಈಗ ಹೊಸ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಕ್ಷೇತ್ರಗಳ ಪುನರ್ವಿಂಗಡಣೆಯ ಬಳಿಕ ಸಂಸತ್ತಿನಲ್ಲಿ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾಗಲಿದೆ ಎಂದು ಅವರು ತಮಿಳುನಾಡಿನ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಕ್ಷೇತ್ರಗಳ ಪುನರ್ವಿಂಗಡಣೆಯಿಂದ ಯಾವುದೇ ರಾಜ್ಯ ಕ್ಷೇತ್ರಗಳನ್ನು ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನಿ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ತಮಿಳುನಾಡು ಸೇರಿದಂತೆ ದಕ್ಷಿಣದ ರಾಜ್ಯಗಳು ಅನುಪಾತದ ಆಧಾರದ ಮೇಲೆ ಹೆಚ್ಚುವರಿ ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದರು.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯ ಪರಿಣಾಮದ ಕುರಿತು ಚರ್ಚಿಸಲು ಮಾರ್ಚ್ 5ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಸಭೆಗೆ 40 ನೋಂದಾಯಿತ ರಾಜಕೀಯ ಪಕ್ಷಗಳನ್ನು ಆಹ್ವಾನಿಸಲಾಗಿದೆ. ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಈ ಸಭೆಯಲ್ಲಿ ಭಾಗವಹಿಸಿ ಒಗ್ಗಟ್ಟಿನಿಂದ ಧ್ವನಿ ಎತ್ತುವಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವರ ಹೇಳಿಕೆ ಹೊರಬಿದ್ದಿದೆ.