ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಿ.ಬಿ. ವರಾಲೆ ಪ್ರಮಾಣ ವಚನ ಸ್ವೀಕಾರ
ಪಿ.ಬಿ. ವರಾಲೆ | Photo: PTI
ಹೊಸದಿಲ್ಲಿ: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರು ಗುರುವಾರ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದರು.
ಇಲ್ಲಿನ ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ವರಾಲೆ ಅವರಿಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ನ್ಯಾಯಮೂರ್ತಿ ವರಾಲೆ ಅವರ ಹೆಸರನ್ನು ಕೇಂದ್ರ ಸರಕಾರ ಬುಧವಾರ ಅನುಮೋದಿಸಿತ್ತು. ನ್ಯಾಯಮೂರ್ತಿ ವರಾಲೆ ಅವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 34 ನ್ಯಾಯಮೂರ್ತಿಗಳ ಸಂಪೂರ್ಣ ಬಲವನ್ನು ಪಡೆದುಕೊಂಡಿದೆ.
ಈ ತಿಂಗಳ ಆರಂಭದಲ್ಲಿ ನ್ಯಾಯಮೂರ್ತಿ ವರಾಲೆ ಅವರ ಹೆಸರನ್ನು ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡುವ ಸಂದರ್ಭ ಸುಪ್ರೀಂ ಕೋರ್ಟ್ ಕೊಲೀಜಿಯಂ, ವರಾಲೆ ಅವರು ಉಚ್ಚ ನ್ಯಾಯಾಲಯದ ಅತ್ಯಂತ ಹಿರಿಯ ಹಾಗೂ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದಾರೆ ಎಂಬ ಅಂಶವನ್ನು ಪರಿಗಣನೆಗೆ ತೆಗೆದುಕೊಂಡಿತ್ತು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗುತ್ತಿರುವ ಪರಿಶಿಷ್ಟ ಜಾತಿಯ ಮೂರನೇ ನ್ಯಾಯಮೂರ್ತಿ ವರಾಲೆ. ಈ ಹಿಂದೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಹಾಗೂ ಸಿ.ಟಿ. ರವಿಕುಮಾರ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿದ್ದರು.