ಪೌರತ್ವ ತಿದ್ದುಪಡಿ ಕಾಯ್ದೆ ಈ ನೆಲದ ಕಾನೂನು; ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ (PTI)
ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ(CAA)ಯು ಈ ನೆಲದ ಕಾನೂನಾಗಿರುವುದರಿಂದ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಹಾಗೂ ಈ ವಿಚಾರದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.
ರಾಷ್ಟ್ರೀಯ ಗ್ರಂಥಾಲಯದಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ಸಾಮಾಜಿಕ ಮಾಧ್ಯಮ ಹಾಗೂ ಮಾಹಿತಿ ತಂತ್ರಜ್ಞಾನ ಘಟಕದ ಆಂತರಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವುದು ನಮ್ಮ ಪಕ್ಷದ ಬದ್ಧತೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳ ಪೈಕಿ 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಈ ರಾಜ್ಯದಲ್ಲಿ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಮತಾ ಬ್ಯಾನರ್ಜಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.
"ಪೌರತ್ವ ತಿದ್ದುಪಡಿ ಕಾಯ್ದೆಯು ದೇಶದಲ್ಲಿ ಜಾರಿಯಾಗಲಿ ಅಥವಾ ಆಗದಿರಲಿ ಅವರು ಪ್ರತಿ ಬಾರಿಯೂ ಜನರನ್ನು, ನಿರಾಶ್ರಿತರನ್ನು ದಿಕ್ಕು ತಪ್ಪಿಸುತ್ತಾರೆ. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆಯು ಈ ನೆಲದ ಕಾನೂನಾಗಿದ್ದು, ಅದರ ಜಾರಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇದು ನಮ್ಮ ಪಕ್ಷದ ಬದ್ಧತೆ" ಎಂದು ಅಮಿತ್ ಶಾ ಪುನರುಚ್ಚರಿಸಿದ್ದಾರೆ.