ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರಕಾರ ಸಲ್ಲಿಸಿದ್ದ ಮೇಲ್ಮನವಿಗೆ ಸಿಬಿಐ ವಿರೋಧ

Photo credit: PTI
ಕೋಲ್ಕತ್ತಾ : ಆರ್ ಜಿಕರ್ ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ವಿಚಾರಣಾಧೀನ ನ್ಯಾಯಾಲಯದ ತೀರ್ಪಿನ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಕಲ್ಕತ್ತಾ ಹೈಕೋರ್ಟ್ ನಲ್ಲಿ ಸಲ್ಲಿಸಿದ ಮೇಲ್ಮನವಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿದ್ದು, ಸಿಬಿಐ ಮಾತ್ರ ಈ ಬಗ್ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ಹೈಕೋರ್ಟ್ ನಲ್ಲಿ ವಾದಿಸಿದೆ.
ಆರ್ ಜಿ ಕಾರ್ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಂಜಯ್ ರಾಯ್ ನ್ನು ದೋಷಿ ಎಂದು ಸೀಲ್ಡಾ ನ್ಯಾಯಾಲಯ ತೀರ್ಪು ನೀಡಿ ಬಳಿಕ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ಆದರೆ ಸಂತ್ರಸ್ತೆಯ ಕುಟುಂಬ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿತ್ತು.
ಸೀಲ್ಡಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ದೇಬಾಂಗ್ಶು ಬಸಕ್ ಮತ್ತು ಎಂಡಿ ಶಬ್ಬರ್ ರಶೀದಿ ಕೈಗೆತ್ತಿಕೊಂಡಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿರುವುದರಿಂದ ಪ್ರಾಸಿಕ್ಯೂಷನ್ ಏಜೆನ್ಸಿ ಮಾತ್ರ ಅಸಮರ್ಪಕತೆಯ ಆಧಾರದ ಮೇಲೆ ಶಿಕ್ಷೆಯನ್ನು ಪ್ರಶ್ನಿಸಬಹುದು ಹೊರತು ರಾಜ್ಯ ಸರಕಾರ ಈ ವಿಷಯದಲ್ಲಿ ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಸಿಬಿಐ ಪರ ವಕೀಲರು ಹೇಳಿದ್ದಾರೆ.
ರಾಜ್ಯ ಸರಕಾರದ ಪರವಾಗಿ ಹಾಜರಾದ ಅಡ್ವೊಕೇಟ್ ಜನರಲ್, ಸಿಬಿಐ ವಾದವನ್ನು ವಿರೋಧಿಸಿದ್ದು, ಪ್ರಕರಣದ ಬಗ್ಗೆ ಮೊದಲು ರಾಜ್ಯ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. ನಂತರ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ಕೋರ್ಟ್ ಗಮನಕ್ಕೆ ತಂದಿದ್ದಾರೆ.