ದಿಲ್ಲಿ ಅಬಕಾರಿ ನೀತಿ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋದ ಅರವಿಂದ್ ಕೇಜ್ರಿವಾಲ್
ದಿಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ ದಿಲ್ಲಿ ಮುಖ್ಯಮಂತ್ರಿ
Photo credit: PTI
ಹೊಸದಿಲ್ಲಿ: ತನ್ನನ್ನು ಸಿಬಿಐ ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ನ ಏಕಸದಸ್ಯ ಪೀಠವು ವಜಾಗೊಳಿಸಿರುವುದನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ತನ್ನ ಬಂಧನವನ್ನು ಪ್ರಶ್ನಿಸಿರುವ ಅರ್ಜಿ ಮಾತ್ರವಲ್ಲದೆ ಈ ಪ್ರಕರಣದಲ್ಲಿ ತಮಗೆ ಸಾಮಾನ್ಯ ಜಾಮೀನು ಮಂಜೂರು ಮಾಡುವಂತೆಯೂ ಅವರು ಅರ್ಜಿ ಸಲ್ಲಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಕಾನೂನು ಘಟಕವು ತಿಳಿಸಿದೆ.
ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ(ಸಿಬಿಐ)ವು, ತನ್ನನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ವಜಾಗೊಳಿಸಿತ್ತು.
ಇದಕ್ಕೂ ಮುನ್ನ, ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿದ್ದ ಪ್ರತ್ಯೇಕ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ, ಸಿಬಿಐ ಪ್ರಕರಣದಲ್ಲಿ ಪರಿಹಾರ ನೀಡಲು ದಿಲ್ಲಿ ಹೈಕೋರ್ಟ್ ನಿರಾಕರಿಸಿರುವುದರಿಂದ, ಅವರಿನ್ನೂ ಜೈಲಿನಲ್ಲಿಯೇ ಉಳಿದಿದ್ದಾರೆ.