ದಿಲ್ಲಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಯೋಗ ದಿನಾಚರಣೆ ಕಾರ್ಯಕ್ರಮ ರದ್ದುಗೊಳಿಸಿದ ಕೇಂದ್ರ ಶಿಕ್ಷಣ ಸಚಿವ
Photo: PTI
ಹೊಸದಿಲ್ಲಿ: ತನ್ನ ಉಪಸ್ಥಿತಿಯ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ಮುಜುಗರಕ್ಕೊಳಗಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ರದ್ದುಗೊಳಿಸಿರುವ ಘಟನೆ ವರದಿಯಾಗಿದೆ.
ವರದಿಗಳ ಪ್ರಕಾರ, ವಿದ್ಯಾರ್ಥಿಗಳು ಶಿಕ್ಷಣ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.
ನೀಟ್ ಹಾಗೂ ಯುಜಿಸಿ-ನೆಟ್ ಪರೀಕ್ಷೆಗಳಲ್ಲಿ ಹಗರಣಗಳು ನಡೆದಿವೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಘೋಷಣೆಗಳನ್ನೂ ಕೂಗಿದ್ದಾರೆ ಎನ್ನಲಾಗಿದೆ.
ಗುರುವಾರ ಮಾಧ್ಯಮ ವಿವರಣೆಯ ಸಂದರ್ಭದಲ್ಲಿ ಮಾತನಾಡಿದ್ದ ಧರ್ಮೇಂದ್ರ ಪ್ರಧಾನ್, ಯುಜಿಸಿ-ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ಸಾಂಸ್ಥಿಕ ವೈಫಲ್ಯವಾಗಿದೆ. ಈ ಸಂಸ್ಥೆಯ ಕಾರ್ಯವೈಖರಿಯ ಕುರಿತು ಪರಿಶೀಲಿಸಲು ಸರಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದ್ದು, ಈ ಸಮಿತಿಯು ಸುಧಾರಣೆಗಳ ಕುರಿತು ಶಿಫಾರಸು ಮಾಡಲಿದೆ ಎಂದು ಹೇಳಿಕೆ ನೀಡಿದ್ದರು.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ವಿವಾದ ಹಾಗೂ ಯುಜಿಸಿ-ನೆಟ್ ಪರೀಕ್ಷೆಯ ರದ್ದತಿ ಬೆನ್ನಿಗೇ ಧರ್ಮೇಂದ್ರ ಪ್ರಧಾನ್ ರಿಂದ ಈ ಹೇಳಿಕೆ ಹೊರ ಬಿದ್ದಿತ್ತು.