ಅಬಕಾರಿ ನೀತಿ ಹಗರಣ: ಜನವರಿ 3ರಂದು ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್ ಗೆ ಮೂರನೆಯ ಸಮನ್ಸ್ ಜಾರಿಗೊಳಿಸಿದ ಈಡಿ
ಅರವಿಂದ್ ಕೇಜ್ರಿವಾಲ್ | Photo: PTI
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದಿದೆಯೆನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಜಾರಿ ನಿರ್ದೇಶನಾಲಯ(ಈಡಿ)ವು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮೂರನೆಯ ಸಮನ್ಸ್ ಜಾರಿಗೊಳಿಸಿದೆ. ಜನವರಿ 3ರಂದು ತನ್ನೆದುರು ಹಾಜರಾಗುವಂತೆ ಆಮ್ ಆದ್ಮಿ ಪಕ್ಷಕ್ಕೆ ಸೂಚಿಸಲಾಗಿದೆ ಎಂದು indiatoday.in ವರದಿ ಮಾಡಿದೆ.
ಇದಕ್ಕೂ ಮುನ್ನ ಜನವರಿ 18ರಂದು ಅರವಿಂದ್ ಕೇಜ್ರಿವಾಲ್ ಗೆ ಸಮನ್ಸ್ ಜಾರಿಗೊಳಿಸಿದ್ದ ಜಾರಿ ನಿರ್ದೇಶನಾಲಯವು, ತನ್ನ ಮುಂದೆ ಡಿಸೆಂಬರ್ 21ರಂದು ಹಾಜರಾಗುವಂತೆ ಅವರಿಗೆ ಸೂಚಿಸಿತ್ತು. ಆದರೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳೆದುರು ಹಾಜರಾಗದಿರಲು ನಿರ್ಧರಿಸಿದ್ದ ಅರವಿಂದ್ ಕೇಜ್ರಿವಾಲ್, 10 ದಿನಗಳ ವಿಪಾಸನಾ ಧ್ಯಾನ ಶಿಬಿರಕ್ಕೆ ತೆರಳಿದ್ದರು.
ಈ ಕುರಿತು ಗುರುವಾರ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್, ಜಾರಿ ನಿರ್ದೇಶನಾಲಯದ ಸಮನ್ಸ್ ಕಾನೂನುಬಾಹಿರವಾಗಿದ್ದು, ರಾಜಕೀಯ ಪ್ರೇರಿತವಾಗಿದೆ. ನನ್ನ ಬಳಿ ಬಚ್ಚಿಟ್ಟುಕೊಳ್ಳಲು ಏನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದಿದೆಯೆನ್ನಲಾದ ಅಕ್ರಮ ಹಣ ವರ್ಗಾವಣೆ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರಿಗೆ ಅಕ್ಟೋಬರ್ ತಿಂಗಳಲ್ಲಿ ಪ್ರಥಮ ಸಮನ್ಸ್ ಜಾರಿಗೊಳಿಸಿತ್ತು.
ಅಬಕಾರಿ ನೀತಿ ಹಗರಣದಲ್ಲಿ ಈಗಾಗಲೇ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಮತ್ತೊಬ್ಬ ನಾಯಕ ಸಂಜಯ್ ಸಿಂಗ್ ಅವರನ್ನು ಬಂಧಿಸಲಾಗಿದೆ.