ಉಚಿತ ಪಡಿತರ ಮುಂದಿನ 5 ವರ್ಷಕ್ಕೆ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ
Photo- PTI
ರಾಂಚಿ: ದೇಶಾದ್ಯಂತ 80 ಕೋಟಿಗೂ ಅಧಿಕ ಜನರಿಗೆ ಮುಂದಿನ ಐದು ವರ್ಷಗಳಲ್ಲಿ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಅವರು ಈ ಘೋಷಣೆ ಮಾಡಿದ್ದಾರೆ.
‘‘ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರವನ್ನು ನೀಡುವ ಯೋಜನೆಯನ್ನು ಮುಂದಿನ ಐದು ವರ್ಷಗಳಿಗೆ ವಿಸ್ತರಿಸಲು ನಾನು ನಿರ್ಧರಿಸಿದ್ದೇನೆ. ಇಂಥ ಪವಿತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನನಗೆ ಯಾವಾಗಲೂ ಶಕ್ತಿ ಕೊಡುತ್ತದೆ’’ ಎಂದು ಪ್ರಧಾನಿ ಮೋದಿ ಹೇಳಿದರು.
ವಿಧಾನಸಭಾ ಚುನಾವಣೆ ನಡೆಯಲಿರುವ ಛತ್ತೀಸ್ಗಢದಲ್ಲಿ ಅವರು ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಆ ಪಕ್ಷವು ಭ್ರಷ್ಟಾಚಾರದಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.
ಕೊರೋನ ವೈರಸ್ ಸಾಂಕ್ರಾಮಿಕವು ಹರಡಿದ್ದಾಗ, 2020ರಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಮ್ಜಿಕೆಎವೈ)ಯನ್ನು ಜಾರಿಗೆ ತರಲಾಗಿತ್ತು. ಆ ಯೋಜನೆಯ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯವನ್ನು ಸರಕಾರವು ಉಚಿತವಾಗಿ ನೀಡುತ್ತಿತ್ತು. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುತ್ತಿದ್ದ ಆಹಾರ ಧಾನ್ಯಗಳಿಗೆ ಹೆಚ್ಚುವರಿಯಾಗಿತ್ತು.