ಹೆಣ್ಣುಮಕ್ಕಳನ್ನು ಮತಾಂತರ ಮಾಡಿದವರಿಗೆ ಮರಣದಂಡನೆ ವಿಧಿಸುವ ಕಾನೂನು ಜಾರಿಗೆ ಚಿಂತನೆ : ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ (Photo: PTI)
ಹೊಸದಿಲ್ಲಿ : ಹೆಣ್ಣುಮಕ್ಕಳನ್ನು ಮತಾಂತರ ಮಾಡಿದವರಿಗೆ ಮರಣದಂಡನೆ ವಿಧಿಸುವ ಕಾನೂನು ಜಾರಿಗೆ ಚಿಂತನೆ ನಡೆಸಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಯಾದವ್, ಅಮಾಯಕ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗುವವರಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಬಗ್ಗೆ ಯೋಜಿಸಲಾಗುತ್ತಿದೆ. ಇದರಂತಯೇ, ಮಧ್ಯಪ್ರದೇಶದಲ್ಲಿ ಹೆಣ್ಣುಮಕ್ಕಳನ್ನು ಕಾನೂನುಬಾಹಿರವಾಗಿ ಮತಾಂತರ ಮಾಡುವವರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲು ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಡಿಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ಅಕ್ರಮ ಮತಾಂತರದ ಹಿಂದೆ ಇರುವವರನ್ನು ರಾಜ್ಯವು ಬಿಡುವುದಿಲ್ಲ. ಇಂತಹ ಅನಿಷ್ಟ ಪದ್ಧತಿಗಳು ಮತ್ತು ತಪ್ಪುಗಳನ್ನು ಕಟ್ಟುನಿಟ್ಟಾಗಿ ತಡೆಯಲು ಸರಕಾರ ನಿರ್ಧರಿಸಿದೆ. ಮಧ್ಯಪ್ರದೇಶ ಸರಕಾರ ಹೆಣ್ಣುಮಕ್ಕಳ ರಕ್ಷಣೆ ಮತ್ತು ಸ್ವಾಭಿಮಾನ ಕಾಪಾಡಲು ಬದ್ಧವಾಗಿದೆ ಎಂದು ಹೇಳಿದರು.