ದಾರಿ ತಪ್ಪಿಸುವ ಜಾಹೀರಾತು ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವುದರಿಂದ ರಾಮ್ ದೇವ್ ಗೆ ವಿನಾಯಿತಿ ನೀಡಿದ ಸುಪ್ರೀಂ ಕೋರ್ಟ್
ಯೋಗ ಗುರು ರಾಮ್ ದೇವ್, ಆಚಾರ್ಯ ಬಾಲಕೃಷ್ಣ | PC : PTI
ಹೊಸದಿಲ್ಲಿ: ದಾರಿ ತಪ್ಪಿಸುವ ಜಾಹೀರಾತುಗಳ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯ ಸಂದರ್ಭದಲ್ಲಿ ಯೋಗ ಗುರು ರಾಮ್ ದೇವ್ ಹಾಗೂ ಪತಂಜಲಿ ಆಯುರ್ವೇದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರಿಗೆ ಖುದ್ದು ಹಾಜರಿಯಿಂದ ಸುಪ್ರೀಂ ಕೋರ್ಟ್ ವಿನಾಯಿತಿ ನೀಡಿದೆ.
ರಾಮ್ ದೇವ್ ಹಾಗೂ ಇನ್ನಿತರರಿಗೆ ಜಾರಿಯಾಗಿರುವ ನ್ಯಾಯಾಂಗ ನಿಂದನೆ ನೋಟಿಸ್ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ನ್ಯಾ. ಹಿಮಾ ಕೊಹ್ಲಿ ಹಾಗೂ ನ್ಯಾ. ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠವು, ಪ್ರಸರಣದಲ್ಲಿರುವ ತನ್ನ ಉತ್ಪನ್ನಗಳ ದಾರಿ ತಪ್ಪಿಸುವ ಜಾಹೀರಾತುಗಳನ್ನು ಹಿಂಪಡೆಯಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಕುರಿತು ಇನ್ನು ಮೂರು ವಾರಗಳಲ್ಲಿ ವಿಸ್ತೃತ ಪ್ರಮಾಣ ಪತ್ರ ಸಲ್ಲಿಸುವಂತೆ ಪತಂಜಲಿ ಸಂಸ್ಥೆಗೆ ಸೂಚಿಸಿದೆ. ಇದೇ ವೇಳೆ ಪರವಾನಗಿಗಳು ಅಮಾನತುಗೊಂಡಿರುವ ತನ್ನ ಉತ್ಪನ್ನಗಳ ಜಾಹೀರಾತುಗಳನ್ನು ಹಿಂಪಡೆಯಲು ತೆಗೆದುಕೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡುವಂತೆಯೂ ಪತಂಜಲಿ ಸಂಸ್ಥೆಗೆ ನಿರ್ದೇಶನ ನೀಡಿದೆ.
ಬಾಬಾ ರಾಮ್ ದೇವ್ ಹಾಗೂ ಬಾಲಕೃಷ್ಣ ಪರವಾಗಿ ನ್ಯಾಯಾಲಯದಲ್ಲಿ ಹಾಜರಿದ್ದ ಹಿರಿಯ ವಕೀಲ ಬಲ್ಬೀರ್ ಸಿಂಗ್, ನಿಷೇಧಗೊಂಡಿರುವ ತನ್ನ ಉತ್ಪನ್ನಗಳನ್ನು ಮುಕ್ತ ಮಾರುಕಟ್ಟೆ ಹಾಗೂ ಆನ್ ಲೈನ್ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವುದನ್ನು ಪತಂಜಲಿ ಸ್ಥಗಿತಗೊಳಿಸಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
ಕೋವಿಡ್ ಲಸಿಕೆ ಅಭಿಯಾನ ಹಾಗೂ ಆಧುನಿಕ ವೈದ್ಯಕೀಯ ಪದ್ಧತಿಗಳ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಒಕ್ಕೂಟವು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.