ಸೆಂಥಿಲ್ ಬಾಲಾಜಿ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರಿ ನಿರ್ದೇಶನಾಲಯಕ್ಕೆ ನ್ಯಾಯಾಲಯ ನೋಟಿಸ್
ವಿ. ಸೆಂಥಿಲ್ ಬಾಲಾಜಿ |Photo : PTI
ಹೊಸದಿಲ್ಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಡಿಎಂಕೆ ಸಚಿವ ವಿ. ಸೆಂಥಿಲ್ ಬಾಲಾಜಿ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ಕುರಿತು ಚೆನ್ನೈಯ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾರಿ ನಿರ್ದೇಶನಾಲಯಕ್ಕೆ ನೋಟಿಸು ಜಾರಿಗೊಳಿಸಿ ಆದೇಶಿಸಿದೆ.
ಜಾರಿ ನಿರ್ದೇಶನಾಲಯಕ್ಕೆ ನೋಟಿಸು ಜಾರಿ ಮಾಡಿದ ಪ್ರಾಥಮಿಕ ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಅಲಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 15ಕ್ಕೆ ಮುಂದೂಡಿದರು. ಜಾಮೀನು ಅರ್ಜಿ ವಿಚಾರಣೆ ಸಂದರ್ಭ ಜಾರಿ ನಿರ್ದೇಶನಾಲಯದ ಪರವಾಗಿ ಹಾಜರಾಗಿದ್ದ ನ್ಯಾಯವಾದಿ ಎನ್. ರಮೇಶ್ ಅವರು ಪ್ರತಿ ಅಫಿಡಾವಿಟ್ ಸಲ್ಲಿಸಲು ಸಮಯಾವಕಾಶ ಕೋರಿದರು.
ಸೆಂಥಿಲ್ ಬಾಲಾಜಿ ಅವರ ಪರವಾಗಿ ಹಾಜರಾಗಿದ್ದ ನ್ಯಾಯವಾದಿ ಡಿ.ಆರ್. ಅರುಣ್ ಕುಮಾರ್, ಮುಂದಿನ ವಿಚಾರಣೆಯನ್ನು ಬೇಗನೆ ನಿಗದಿಪಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲಿ ಅವರು ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟಂಬರ್ 15ಕ್ಕೆ ಮುಂದೂಡಿದರು.