ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದ್ದರೆ ಇಂಡಿಯಾ ಮೈತ್ರಿಕೂಟ 25-30 ಹೆಚ್ಚು ಸ್ಥಾನ ಪಡೆಯುತ್ತಿತ್ತು: ಸಂಜಯ್ ರಾವತ್
ಸಂಜಯ್ ರಾವತ್ (Photo: PTI)
ಹೊಸದಿಲ್ಲಿ: ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನೇನಾದರೂ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಿದ್ದರೆ, ಇಂಡಿಯಾ ಮೈತ್ರಿಕೂಟವು 25-30 ಹೆಚ್ಚುವರಿ ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿತ್ತು ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಅಭಿಪ್ರಾಯ ಪಟ್ಟಿದ್ದಾರೆ.
ಈ ಹೇಳಿಕೆಯು ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಅಂಗಪಕ್ಷಗಳಾದ ಶಿವಸೇನೆ (ಉದ್ಧವ್ ಠಾಕ್ರೆ ಬಣ), ಕಾಂಗ್ರೆಸ್ ಹಾಗೂ ಎನ್ಸಿಪಿ (ಎಸ್ಪಿ) ಪಕ್ಷಗಳು ಸಿದ್ಧತೆ ನಡೆಸುತ್ತಿರುವ ಬೆನ್ನಿಗೇ ಹೊರ ಬಿದ್ದಿದೆ.
“ಜನರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ನೋಡಿ ತಮ್ಮ ನಿಲುವನ್ನು ಬದಲಿಸಿಕೊಳ್ಳುತ್ತಾರೆ. ಒಂದು ವೇಳೆ ಸೂಕ್ತ ಸಮಯದಲ್ಲಿ ರಾಹುಲ್ ಗಾಂಧಿ ಅವರನ್ನೇನಾದರೂ ಪ್ರಧಾನಿ ಅಭ್ಯರ್ಥಿಯೆಂದು ಘೋಷಿಸಿದ್ದರೆ, ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವು 25-30 ಹೆಚ್ಚುವರಿ ಸ್ಥಾನಗಳಲ್ಲಿ ಗೆಲುವು ಸಾಧಿಸಿರುತ್ತಿತ್ತು” ಎಂದು ಅವರು ANI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
“ರಾಜ್ಯ ಸರಕಾರವನ್ನು ಕಿತ್ತೊಗೆಯಲು ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಕಠಿಣ ಪ್ರಯತ್ನ ನಡೆಸುತ್ತಿದೆ. ಉದ್ಧವ್ ಠಾಕ್ರೆ ಕೂಡಾ ಇದೇ ನೆಲೆಯಲ್ಲಿ ಹೇಳಿಕೆ ನೀಡಿದ್ದು, ಯಾರೇ ಮುಖ್ಯಮಂತ್ರಿ ಅಭ್ಯರ್ಥಿಯಾದರೂ, ನಾವು ಅವರಿಗೆ ಬೆಂಬಲ ನೀಡಲಿದ್ದೇವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಆಗಸ್ಟ್ 16ರಂದು ನಡೆದಿದ್ದ ಮಹಾ ವಿಕಾಸ್ ಅಘಾಡಿಯ ಸಭೆಯಲ್ಲಿ ಶಿವಸೇನೆಯ ಮುಖ್ಯಸ್ಥರಾದ ಉದ್ಧವ್ ಠಾಕ್ರೆ ಅವರು, ಸಮಯ ವ್ಯರ್ಥ ಮಾಡದೆ ಮುಂಚಿತವಾಗಿಯೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪ್ರಕಟಿಸಬೇಕು ಎಂದು ಕರೆ ನೀಡಿದ್ದರು. ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಅಂಗಪಕ್ಷಗಳ ವೈಯಕ್ತಿಕ ಸಾಧನೆಗೆ ಕಾಯದೆ ಈ ಕೆಲಸ ಮಾಡಬೇಕು ಎಂದೂ ಅವರು ಸಲಹೆ ನೀಡಿದ್ದರು.
ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.