ಲೋಕಸಭಾ ಚುನಾವಣಾ ಫಲಿತಾಂಶ | ಅತಿಯಾದ ಆತ್ಮವಿಶ್ವಾಸದಿಂದ ಬಿಜೆಪಿಗೆ ಹಿನ್ನಡೆಯಾಯಿತು : ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್ | PC : PTI
ಲಕ್ನೊ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದ ಬಿಜೆಪಿಗೆ ಹಿನ್ನಡೆಯುಂಟಾಯಿತು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಭಿಪ್ರಾಯ ಪಟ್ಟಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯುಂಟಾದ ನಂತರ ಪ್ರಪ್ರಥಮ ಬಾರಿಗೆ ನಡೆದ ಉತ್ತರ ಪ್ರದೇಶ ಬಿಜೆಪಿ ಘಟಕದ ಪ್ರಮುಖ ಸಭೆಯೊಂದರಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಲಕ್ನೊದಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಬಿಜೆಪಿಯು ಈ ಹಿಂದಿನ ಚುನಾವಣೆಯಲ್ಲಿ ಗಳಿಸಿದ್ದ ಮತ ಪ್ರಮಾಣವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಮತಗಳ ವರ್ಗಾವಣೆ ಆಗಿರುವುದರಿಂದ ಈ ಹಿಂದೆ ಪರಾಭವಗೊಂಡಿದ್ದ ವಿರೋಧ ಪಕ್ಷಗಳು ಕುಣಿಯುತ್ತಿವೆ ಎಂದು ವ್ಯಂಗ್ಯವಾಡಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಡಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ ವಿರೋಧ ಪಕ್ಷಗಳ ಮೇಲೆ ನಿರಂತರವಾಗಿ ಒತ್ತಡ ಉಳಿಸಿಕೊಂಡು ಬಂದಿದೆ. ಅದರ ಪರಿಣಾಮವಾಗಿ, 2017 ಹಾಗೂ 2022ರ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ 2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ದೊಡ್ಡ ಯಶಸ್ಸು ಗಳಿಸಿತ್ತು. 2024ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಈ ಹಿಂದಿನ ಪ್ರಮಾಣದ ಮತ ಗಳಿಕೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೂ, ಮತಗಳ ವರ್ಗಾವಣೆ ಹಾಗೂ ಅತಿಯಾದ ಆತ್ಮವಿಶ್ವಾಸದಿಂದ ಪಕ್ಷದ ನಿರೀಕ್ಷೆಗೆ ಘಾಸಿಯುಂಟಾಗಿದೆ" ಎಂದು ಅವರು ಹೇಳಿದ್ದಾರೆ.
ಏಳು ರಾಜ್ಯಗಳಲ್ಲಿ ನಡೆದ ಉಪ ಚುನಾವಣೆಯ ಫಲಿತಾಂಶದಲ್ಲಿ ಎನ್ಡಿಎ ನಿರಾಶಾದಾಯಕ ಪ್ರದರ್ಶನ ನೀಡಿರುವ ಮರುದಿನವೇ ಯೋಗಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ.