ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ
Photo:X/@INCIndia
ಹೊಸದಿಲ್ಲಿ: ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾರೊಂದಿಗೆ ತೆರಳಿದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ರಾಹುಲ್ ಗಾಂಧಿ ತಮ್ಮ ನಾಮಪತ್ರ ಸಲ್ಲಿಸಿದಾಗ, ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಕೂಡಾ ಜೊತೆಗಿದ್ದರು.
ಇಂದು ಬೆಳಗ್ಗೆ ಎರಡು ಪ್ರತಿಷ್ಠಿತ ಕ್ಷೇತ್ರಗಳಾದ ರಾಯ್ ಬರೇಲಿ ಮತ್ತು ಅಮೇಥಿ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿತು. ಅಮೇಥಿ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದ ರಾಹುಲ್ ಗಾಂಧಿಯವರೇ ಮತ್ತೆ ಆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿಗಳಿಗೆ ತೆರೆ ಎಳೆದ ಕಾಂಗ್ರೆಸ್, ಈ ಬಾರಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಕಳೆದ ಎರಡು ದಶಕಗಳಿಂದ ತನ್ನ ತಾಯಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ರಾಯ್ ಬರೇಲಿ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಸ್ಥಳಾಂತರಗೊಂಡಿದ್ದಾರೆ. ರಾಜ್ಯಸಭಾ ಸದಸ್ಯರಾಗಿ ಚುನಾಯಿತರಾಗಿರುವ ಸೋನಿಯಾ ಗಾಂಧಿ ಅವರು ತಮ್ಮ ವೃದ್ಧಾಪ್ಯ ಹಾಗೂ ಆರೋಗ್ಯ ಸಮಸ್ಯೆಗಳ ಕಾರಣದಿಂದ ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಎರಡನೆ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ ಸೋನಿಯಾ ಗಾಂಧಿ ಗೆಲುವು ಸಾಧಿಸಿದ್ದರು.