12 ಸಚಿವರೊಂದಿಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ರೇವಂತ್ ರೆಡ್ಡಿ
ರೇವಂತ್ ರೆಡ್ಡಿ (PTI)
ಹೈದರಾಬಾದ್: ಹೈದರಾಬಾದಿನ ಎಲ್ಬಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಅದ್ದೂರಿ ಕಾರ್ಯಕ್ರಮದಲ್ಲಿ ತೆಲಂಗಾಣ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ರೇವಂತ್ ರೆಡ್ಡಿ ತೆಲಂಗಾಣ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ndtv.com ವರದಿ ಮಾಡಿದೆ.
ರೇವಂತ್ ರೆಡ್ಡಿ ಅವರೊಂದಿಗೆ ಉತ್ತಮ್ ಕುಮಾರ್ ರೆಡ್ಡಿ, ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿರೆಡ್ಡಿ ವೆಂಕಟರ್ ರೆಡ್ಡಿ, ದಾಮೋದರ್ ರಾಜಾನರಸಿಂಹ, ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ದಾನ ಅನುಸೂಯ, ತುಮ್ಮಲ ನಾಗೇಶ್ವರ್ ರಾವ್, ಕೊಂಡ ಸುರೇಖಾ ಹಾಗೂ ಜೂಪಲ್ಲಿ ಕೃಷ್ಣ ರಾವ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಲ್ಲು ಭಟ್ಟಿ ವಿಕ್ರಮಾರ್ಕ ಅವರನ್ನು ತೆಲಂಗಾಣದ ಉಪ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಅವರೂ 12 ಮಂದಿ ಸಚಿವರು ಹಾಗೂ ನಿಯೋಜಿತ ಮುಖ್ಯಮಂತ್ರಿಯೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಈ ಅದ್ದೂರಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಇವರೊಂದಿಗೆ ಸುಮಾರು ಒಂದು ಲಕ್ಷ ಮಂದಿಯೂ ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವ ನಿರೀಕ್ಷೆ ಇದೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಹಾಗೂ ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಣಿಕ್ ರಾವ್ ಥಾಕರೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿವಿಧ ರಾಜ್ಯಗಳ ಕಾಂಗ್ರೆಸ್ ಮುಖ್ಯಸ್ಥರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.