ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಒಪ್ಪಿಗೆ ಹಿಂದೆಗೆತ ಪ್ರಶ್ನಿಸಿರುವ ಅರ್ಜಿಯ ವಿಚಾರಣೆ ನಾಲ್ಕು ವಾರ ಮುಂದೂಡಿದ ಸುಪ್ರೀಂ
ಸುಪ್ರೀಂ ಕೋರ್ಟ್, ಡಿ.ಕೆ.ಶಿವಕುಮಾರ್ | PC : PTI
ಹೊಸದಿಲ್ಲಿ : ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂದೆಗೆದುಕೊಂಡಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಸೋಮವಾರ ನಾಲ್ಕು ವಾರಗಳ ಕಾಲ ಮುಂದೂಡಿದೆ.
ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದ ವಿರುದ್ಧ ಸಿಬಿಐ ಕೂಡ ಮೇಲ್ಮನವಿಯನ್ನು ಸಲ್ಲಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರು ತಿಳಿಸಿದ ಬಳಿಕ ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಉಜ್ಜಲ ಭುಯಾನ್ ಅವರ ಪೀಠವು ವಿಚಾರಣೆಯನ್ನು ಮುಂದೂಡಿತು.
ಸಿಬಿಐ ತನಿಖೆಗೆ ಒಪ್ಪಿಗೆ ವಾಪಸಾತಿಯನ್ನು ಪ್ರಶ್ನಿಸಿ ತಾನು ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ್ದ ಕರ್ನಾಟಕ ಉಚ್ಛ ನ್ಯಾಯಾಲಯದ ಆ.29ರ ಆದೇಶವನ್ನು ಪ್ರಶ್ನಿಸಿ ಯತ್ನಾಳ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಕೈಗೆತ್ತಿಕೊಂಡಿತ್ತು.
ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ಇನ್ನೂ ವಿಚಾರಣೆಗೆ ಪಟ್ಟಿ ಮಾಡಲಾಗಿಲ್ಲ ಎಂದು ಮೆಹ್ತಾ ಪೀಠಕ್ಕೆ ತಿಳಿಸಿದರೆ ,ಶಿವಕುಮಾರ್ ಪರ ಹಿರಿಯ ವಕೀಲ ರಂಜಿತ್ ಕುಮಾರ್ ಅವರು, ಈ ವಿಷಯದಲ್ಲಿ ಉತ್ತರವನ್ನು ಸಲ್ಲಿಸಲು ಕಾಲಾವಕಾಶವನ್ನು ಕೋರಿದರು.
ಸರ್ವೋಚ್ಚ ನ್ಯಾಯಾಲಯವು ಸೆ.17ರಂದು ಯತ್ನಾಳ್ ಅರ್ಜಿಗೆ ಸಂಬಂಧಿಸಿದಂತೆ ಶಿವಕುಮಾರ್ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಹೊರಡಿಸಿತ್ತು.
ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ತನಗೆ ನೀಡಿದ್ದ ಒಪ್ಪಿಗೆಯನ್ನು ಹಿಂದೆಗೆದುಕೊಂಡ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯವು ಆ.29ರಂದು ತಿರಸ್ಕರಿಸಿತ್ತು.
ಶಿವಕುಮಾರ್ ವಿರುದ್ಧದ 74.98 ಕೋಟಿ ರೂ.ಅಕ್ರಮ ಆಸ್ತಿ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಿ ರಾಜ್ಯ ಸರಕಾರವು 2023, ನ.23ರಂದು ಆದೇಶಿಸಿದ್ದನ್ನು ಸಿಬಿಐ ಪ್ರಶ್ನಿಸಿತ್ತು. ಶಿವಕುಮಾರ್ 2013 ಮತ್ತು 2018ರ ನಡುವೆ ಆಗಿನ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗಿದ್ದಾಗ ತನ್ನ ಬಲ್ಲ ಆದಾಯ ಮೂಲಗಳಿಗಿಂತ ಹೆಚ್ಚಿನ ಆಸ್ತಿಯನ್ನು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು.