ವಿರೋಧ ಪಕ್ಷಗಳಿಗೆ ಸುಪ್ರೀಂಕೋರ್ಟ್ ಕಪಾಳಮೋಕ್ಷ ಮಾಡಿದೆ: ವಿವಿಪ್ಯಾಟ್ ತೀರ್ಪು ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ (PTI)
ಹೊಸದಿಲ್ಲಿ: ಇವಿಎಂ ಮೂಲಕ ಚಲಾವಣೆಯಾದ ಎಲ್ಲ ಮತಗಳನ್ನು ವೋಟರ್ ವೆರಿಫೈಯೇಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಜತೆ ತಾಳೆ ನೋಡಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿರುವ ಕ್ರಮವನ್ನು ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ, "ಇದು ವಿರೋಧ ಪಕ್ಷಗಳಿಗೆ ಕಪಾಳಮೋಕ್ಷ" ಎಂದು ಪ್ರತಿಕ್ರಿಯಿಸಿದ್ದಾರೆ.
ಈ ವಿಚಾರದಲ್ಲಿ ವಿರೋಧ ಪಕ್ಷಗಳು ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಬಿಹಾರದ ಅರರಿಯಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ ಈ ಅಭಿಪ್ರಾಯ ವ್ಯಕ್ತಪಡಿಸಿದರು.
"ಇಂದು ನಮ್ಮ ಪ್ರಜಾಪ್ರಭುತ್ವಕ್ಕೆ ಅತ್ಯಂಥ ಪವಿತ್ರ ದಿನ. ಇವಿಎಂಗಳ ಬಗ್ಗೆ ಬೊಬ್ಬೆ ಹೊಡೆಯುತ್ತಿರುವ ವಿರೋಧ ಪಕ್ಷಗಳಿಗೆ ಸುಪ್ರೀಂಕೋರ್ಟ್ ಕಪಾಳಮೋಕ್ಷ ಮಾಡಿದೆ" ಎಂದು ಹೇಳಿದರು.
"ಇಡೀ ವಿಶ್ವ ನಮ್ಮ ಪ್ರಜಾಪ್ರಭುತ್ವವನ್ನು ಮತ್ತು ಚುನಾವಣಾ ವಿಧಾನವನ್ನು ಹೊಗಳುತ್ತಿದ್ದರೆ, ವಿರೋಧಪಕ್ಷಗಳು ಇದನ್ನು ವೈಯಕ್ತಿಕ ಲಾಭಗಳಿಗಾಗಿ ಅವಹೇಳನ ಮಾಡುತ್ತಿವೆ" ಎಂದು ಟೀಕಿಸಿದರು.