ಭಯೋತ್ಪಾದಕ ದಾಳಿ ಎಚ್ಚರಿಕೆ: ಮುಂಬೈನಲ್ಲಿ ಬಿಗಿ ಭದ್ರತೆ
ಸಾಂದರ್ಭಿಕ ಚಿತ್ರ | PTI
ಮುಂಬೈ: ಮುಂಬರುವ ಹಬ್ಬದ ಋತುವಿನಲ್ಲಿ ಮುಂಬೈ ನಗರದ ಮೇಲೆ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಧಾರ್ಮಿಕ ಸ್ಥಳಗಳು ಸೇರಿದಂತೆ ಜನಸಂದಣಿ ಇರುವ ಪ್ರದೇಶಗಳಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ ಎಂದು indiatoday.in ಸುದ್ದಿ ಸಂಸ್ಥೆ ವರದಿ ಮಾಡಿದೆ.
ಭಯೋತ್ಪಾದಕ ದಾಳಿ ಬೆದರಿಕೆಯ ಹಿನ್ನೆಲೆಯಲ್ಲಿ ಅಣಕು ಕಾರ್ಯಾಚರಣೆ ನಡೆಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
“ಜನಸಂದಣಿ ಪ್ರದೇಶಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಅಣಕು ಕಾರ್ಯಾಚರಣೆ ನಡೆಸುವಂತೆ ನಮಗೆ ಸೂಚಿಸಲಾಗಿದೆ. ತಮ್ಮ ತಮ್ಮ ವಲಯಗಳಲ್ಲಿ ಭದ್ರತಾ ವ್ಯವಸ್ಥೆಗೆ ವಿಶೇಷ ಗಮನ ಹರಿಸುವಂತೆ ಎಲ್ಲ ಉಪ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಭಾರಿ ಜನಸಂದಣಿ ನೆರೆಯುವ ಹಾಗೂ ಎರಡು ಧಾರ್ಮಿಕ ಸ್ಥಳಗಳಿಗೆ ತವರಾಗಿರುವ ಕ್ರಾಫರ್ಡ್ ಮಾರ್ಕೆಟ್ ಪ್ರದೇಶದಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು ಎಂದು ಶುಕ್ರವಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಮುಂಬರುವ ಹಬ್ಬಗಳು ಹಾಗೂ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಮುಂಬೈನ ಕ್ರಾಫರ್ಡ್ ಮಾರ್ಕೆಟ್ ಹಾಗೂ ಇನ್ನಿತರ ಸ್ಥಳಗಳಲ್ಲಿ ಅಣಕು ಕಾರ್ಯಾಚರಣೆಗಳನ್ನು ನಡೆಸಲಾಯಿತು” ಎಂದು ಪೊಲೀಸರು ಹೇಳಿದ್ದಾರೆ.
ನಗರದಲ್ಲಿನ ದೇವಸ್ಥಾನಗಳಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ಪೊಲೀಸರಿಗೆ ವರದಿ ಮಾಡುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ಹೇಳಲಾಗಿದೆ.