ಸರಕಾರ ಸೆಂಚುರಿ ಬಾರಿಸಿ ಮುನ್ನುಗ್ಗಿದೆ, ಕೆಲಸ ಜನರ ಕಣ್ಣಿಗೆ ಕಾಣುತ್ತಿದೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
ಬೆಂಗಳೂರು: ‘ಸರಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ’ ಎಂದು ಉಪಮಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಮ್ಮ ಸರಕಾರ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದೆಲ್ಲೆಡೆ ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1.10ಕೋಟಿ ಮನೆ ಯಜಮಾನಿಯರಿಗೆ ಆ.30ರಿಂದ ಪ್ರತಿ ತಿಂಗಳು 2 ಸಾವಿರ ರೂ. ಹಣ ತಲುಪಲಿದೆ’ ಎಂದರು.
‘1.36 ಕೋಟಿ ಜನರಿಗೆ ಉಚಿತ ಅಕ್ಕಿ ತಲುಪುತ್ತಿದೆ. 1.41 ಕೋಟಿ ಗ್ರಾಹಕರಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿದೆ. ಡಿಸೆಂಬರ್ ವೇಳೆಗೆ ನಿರುದ್ಯೋಗಿ ಯುವಕರಿಗೆ ಭತ್ಯೆ ಯೋಜನೆ ಜಾರಿ ಮಾಡುತ್ತೇವೆ. ಇದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರದ ಕಾರ್ಯವೈಖರಿ. ನಾವು ಕೊಟ್ಟ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದ್ದು, ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಯಾವ ಸರಕಾರ ಇಷ್ಟು ಕೆಲಸ ಮಾಡಿದೆ ಹೇಳಿ?’ ಎಂದು ಶಿವಕುಮಾರ್ ಪ್ರಶ್ನಿಸಿದರು.
ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ‘ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಜತೆ ನಮ್ಮ ಪಕ್ಷದ ಪ್ರಣಾಳಿಕೆ ಹಾಗೂ ಇತರೆ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಎನ್ಆರ್ಐ ವಿಚಾರ, ಬೆಂಗಳೂರಿನಲ್ಲಿ ಉಚಿತ ವೈ-ಫೈ ವಲಯ ನಿರ್ಮಾಣ ಸಂಬಂಧ ಸಭೆಯ ದಿನಾಂಕ ಪ್ರಕಟಿಸುತ್ತೇವೆ’ ಎಂದು ಅವರು ತಿಳಿಸಿದರು.
‘ಸುಳ್ಳು ಸುದ್ದಿ ಹರಡುವವರನ್ನು ನಿಯಂತ್ರಿಸಲು ಗೃಹ ಇಲಾಖೆ, ಐಟಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಸುಳ್ಳು ಸುದ್ದಿಯಿಂದ ಕೋಮುಗಲಭೆ, ಗದ್ದಲ, ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಇವುಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ತಿಳಿಸಿದರು.