ಅರವಿಂದ್ ಕೇಜ್ರಿವಾಲ್ ರನ್ನು ದಿಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಕೋರಿ ಮೂರನೆಯ ಅರ್ಜಿ
ಮತ್ತೊಮ್ಮೆ ಇಂತಹ ಅರ್ಜಿ ಸಲ್ಲಿಸಿದರೆ ಭಾರೀ ದಂಡ ವಿಧಿಸಬೇಕಾಗುತ್ತದೆ ಎಂದ ದಿಲ್ಲಿ ಹೈಕೋರ್ಟ್
ಅರವಿಂದ್ ಕೇಜ್ರಿವಾಲ್ | PC : PTI
ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದಿಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ರಿಟ್ ಅರ್ಜಿ ಸಲ್ಲಿಸಿರುವ ಆಮ್ ಆದ್ಮಿ ಪಕ್ಷದ ಮಾಜಿ ಶಾಸಕ ಸಂದೀಪ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾ. ಸುಬ್ರಮೊನಿಯಮ್, ಮತ್ತೊಮ್ಮೆ ಇಂತಹ ಅರ್ಜಿಯನ್ನು ಸಲ್ಲಿಸಿದರೆ ಭಾರಿ ದಂಡ ವಿಧಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇಂತಹುದೇ ಅರ್ಜಿಗಳು ಹಂಗಾಮಿ ಮುಖ್ಯ ನ್ಯಾಯಾಧೀಶ ಮನಮೋಹನ್ ನೇತೃತ್ವದ ವಿಭಾಗೀಯ ಪೀಠದಿಂದ ವಿಲೇವಾರಿ ಆಗಿರುವಾಗ, ಈ ಅರ್ಜಿಯನ್ನೂ ಅದೇ ನ್ಯಾಯಪೀಠದ ಮುಂದೆ ಪಟ್ಟಿ ಮಾಡಬೇಕು ಎಂದು ಅವರು ಹೇಳಿದರು.
ಇಂತಹ ಮನವಿ ಮಾಡಿರುವ ಮೂರನೆಯ ಅರ್ಜಿ ಇದಾಗಿದೆ. ಈ ಹಿಂದಿನ ಎರಡು ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಾಧೀಶ ಮನಮೋಹನ್ ನೇತೃತ್ವದ ವಿಭಾಗೀಯ ಪೀಠವು ವಜಾಗೊಳಿಸಿತ್ತು.
ಮುಖ್ಯಮಂತ್ರಿ ಹುದ್ದೆಯಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ವಜಾಗೊಳಿಸಬೇಕು ಎಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ಈ ತಿಂಗಳ ಆರಂಭದಲ್ಲಿ ನ್ಯಾಯಾಲಯವು ನಿರಾಕರಿಸಿತ್ತು. ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಾಮಾಜಿಕ ಕಾರ್ಯಕರ್ತ ಹಾಗೂ ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತ ಸಲ್ಲಿಸಿದ್ದರು.
ಇದಕ್ಕೂ ಮುನ್ನ ಸುರ್ಜಿತ್ ಸಿಂಗ್ ಯಾದವ್ ಎಂಬ ಅರ್ಜಿದಾರರೂ ಕೂಡಾ ಇಂತಹುದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಅವರು ಯಾವ ಕಾನೂನು ಬಂಧನಕ್ಕೀಡಾಗಿರುವ ಮುಖ್ಯಮಂತ್ರಿಯು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವುದನ್ನು ನಿಷೇಧಿಸುತ್ತದೆ ಎಂದು ನಿರೂಪಿಸುವಲ್ಲಿ ವಿಫಲರಾಗಿದ್ದರಿಂದ, ಅವರ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು.
ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಂಗಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದ ನ್ಯಾಯಾಲಯವು, ಪ್ರಭುತ್ವದ ಇತರ ಅಂಗಗಳು ಈ ಕುರಿತು ಪರಿಶೀಲಿಸಬೇಕು ಎಂದು ಹೇಳಿತು.
ಅರವಿಂದ್ ಕೇಜ್ರಿವಾಲ್ ರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮಾಜಿ ಶಾಸಕ ಸಂದೀಪ್ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ಎಪ್ರಿಲ್ 10ರಂದು ವಿಚಾರಣೆಗೆ ಪಟ್ಟಿ ಮಾಡಿದೆ.
ದಿಲ್ಲಿ ಅಬಕಾರಿ ನೀತಿ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.