ಟಿಎಂಸಿ ಜೊತೆ ಸೀಟು ಹಂಚಿಕೆ ಬಿಕ್ಕಟ್ಟಿಗೆ ಪರಿಹಾರ ದೊರೆಯುವ ಭರವಸೆ ಇದೆ: ಜೈರಾಮ್ ರಮೇಶ್
ಜೈರಾಮ್ ರಮೇಶ್ | Photo : PTI
ಸಿಲಿಗುರಿ: ಪಕ್ಷ ಟಿಎಂಸಿ ಜೊತೆಗಿನ ಸೀಟು ಹಂಚಿಕೆ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ಭರವಸೆ ಇದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಗುರುವಾರ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಲಾಗುವುದು ಎಂದು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರ ಅಚ್ಚರಿಯ ಘೋಷಣೆಯ ಒಂದು ದಿನದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.
ಇಲ್ಲಿನ ಬಾಗ್ದೊಗ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೈರಾಮ್ ರಮೇಶ್, ದೇಶದಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಮಮತಾ ಬ್ಯಾನರ್ಜಿ ಅವರು ಅನಿವಾರ್ಯವಾಗಿರುವುದರಿಂದ ಅವರನ್ನು ಹೊರತುಪಡಿಸಿ ‘ಇಂಡಿಯಾ’ ಮೈತ್ರಿಕೂಟವನ್ನು ಯೋಚಿಸಲು ಕೂಡ ಸಾಧ್ಯವಿಲ್ಲ ಎಂದರು.
‘‘ನಮ್ಮೆಲ್ಲರ ಗುರಿ ಒಂದೇ ಆಗಿರುವುದರಿಂದ ಮಮತಾ ಬ್ಯಾನರ್ಜಿ ಅವರು ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕೆಂದು ನಾವೆಲ್ಲರೂ ಬಯಸುತ್ತೇವೆ. ನಾವು ಪಶ್ಚಿಮಬಂಗಾಳ ಹಾಗೂ ಭಾರತದಲ್ಲಿ ಬಿಜೆಪಿಯನ್ನು ಸೋಲಿಸಲು ಬಯಸುವುದಾದರೆ, ಅವರ ಅಗತ್ಯತೆ ತುಂಬಾ ಇದೆ. ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಮಮತಾಜಿಗೆ ಅಪಾರ ಗೌರವ ನೀಡುತ್ತಾರೆ’’ ಎಂದು ಅವರು ಹೇಳಿದ್ದಾರೆ.
‘‘ನಾನು ಸ್ಥಾನ ಹಂಚಿಕೆ ಕುರಿತು ಯಾವುದೇ ರೀತಿಯ ಹೇಳಿಕೆ ನೀಡಲು ಬಯಸುವುದಿಲ್ಲ. ಆದರೆ, ಈ ಬಿಕ್ಕಟ್ಟು ಕೊನೆಗೊಳ್ಳಬೇಕು ಎಂದು ನಾವು ಬಯಸುತ್ತೇವೆ ಮತ್ತು ಪರಿಹಾರ ಕಂಡುಕೊಳ್ಳುತ್ತೇವೆ’’ ಎಂದು ಜೈರಾಮ್ ರಮೇಶ್ ಹೇಳಿದರು.