ಉತ್ತರಪ್ರದೇಶ | ಮೂರು ಅಂತಸ್ತಿನ ಕಟ್ಟಡ ಕುಸಿತ ; 10 ಮಂದಿ ಮೃತ್ಯು
Photo : India Today
ಮೀರತ್ : ಭಾರೀ ಮಳೆಗೆ ಮೀರತ್ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.
ಮೀರತ್ನ ಜಾಕಿರ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಇದುವರೆಗೆ ಒಟ್ಟು ಐವರನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. ಮೃತ 10 ಮಂದಿಯಲ್ಲಿ ಒಂದು ವರ್ಷದ ಮಗು ಸೇರಿದಂತೆ ನಾಲ್ವರು ಮಕ್ಕಳಿದ್ದರು.
ಮೀರತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ, 10 ಮಂದಿಯ ಸಾವನ್ನು ದೃಢಪಡಿಸಿದ್ದು, ನಿರಂತರ ಮಳೆಯಿಂದಾಗಿ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ ಎಂದು ಹೇಳಿದ್ದಾರೆ.
ಸುಮಾರು 35 ವರ್ಷಗಳಷ್ಟು ಹಳೆಯದಾದ ಕಟ್ಟಡವೂ ಶಿಥಿಲಾವಸ್ಥೆಯಲ್ಲಿತ್ತು. ಮಳೆಯಿಂದಾಗಿ ಕಟ್ಟಡ ಕುಸಿದಿರಬಹುದು ಎಂದು ರಕ್ಷಣಾ ಇಲಾಖೆ ಸಿಬ್ಬಂದಿ ಶಂಕಿಸಿದ್ದಾರೆ. ಭಾರೀ ಮಳೆಯ ಮಧ್ಯೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದು, ರಕ್ಷಣಾ ಕಾರ್ಯವನ್ನು ತ್ವರಿತಗೊಳಿಸುವಂತೆ ರಕ್ಷಣಾ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸೆ.7ರಂದು ಲಕ್ನೋದ ಟ್ರಾನ್ಸ್ ಪೋರ್ಟ್ ನಗರ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು 8 ಜನರು ಸಾವನ್ನಪ್ಪಿ, 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದರ ಬೆನ್ನಲ್ಲಿ ಮತ್ತೊಂದು ದುರಂತ ಸಂಭವಿಸಿದೆ.