ಮೀಸಲಾತಿಯನ್ನು ಧರ್ಮದ ಆಧಾರದಲ್ಲಿ ಒದಗಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್
ಪಶ್ಚಿಮ ಬಂಗಾಳ ಒಬಿಸಿ ವರ್ಗೀಕರಣ ಪ್ರಕರಣ
ಸುಪ್ರೀಂ ಕೋರ್ಟ್ | PC : PTI
ಹೊಸದಿಲ್ಲಿ : ಮೀಸಲಾತಿಯನ್ನು ಧರ್ಮದ ಆಧಾರದಲ್ಲಿ ಒದಗಿಸಲು ಸಾಧ್ಯವಿಲ್ಲ ಎಂದು ಸೋಮವಾರ ಸುಪ್ರೀಂ ಕೋರ್ಟ್ ಹೇಳಿದೆ. 2010ರಿಂದ ಪಶ್ಚಿಮ ಬಂಗಾಳದಲ್ಲಿ ವಿವಿಧ ಜಾತಿಗಳಿಗೆ ನೀಡಲಾಗಿದ್ದ ಇತರೆ ಹಿಂದುಳಿದ ವರ್ಗಗಳ ಮಾನ್ಯತೆಯನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿತು.
ಮೇ 22ರಂದು ಕಲ್ಕತ್ತಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರಕಾರ ಸಲ್ಲಿಸಿದ್ದ ಅರ್ಜಿ ಸೇರಿದಂತೆ ಹಲವು ಅರ್ಜಿಗಳ ವಿಚಾರಣೆ ಇಂದು ನ್ಯಾ. ಬಿ.ಆರ್.ಗವಾಯಿ ಹಾಗೂ ನ್ಯಾ. ಕೆ.ವಿ.ವಿಶ್ವನಾಥನ್ ನೇತೃತ್ವದ ಪೀಠದ ಮುಂದೆ ಬಂದಿತು.
“ಮೀಸಲಾತಿಯನ್ನು ಧರ್ಮದ ಆಧಾರದಲ್ಲಿ ನೀಡಲು ಸಾಧ್ಯವಿಲ್ಲ” ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾ. ಬಿ.ಆರ್.ಗವಾಯಿ ಅಭಿಪ್ರಾಯಪಟ್ಟರು. ಪಶ್ಚಿಮ ಬಂಗಾಳ ಸರಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, “ಇದು ಧರ್ಮದ ಆಧಾರದ ಮೀಸಲಾತಿಯಲ್ಲ; ಹಿಂದುಳಿದಿರುವಿಕೆ ಆಧಾರದ ಮೀಸಲಾತಿ” ಎಂದು ವಾದಿಸಿದರು.
ಇದಕ್ಕೂ ಮುನ್ನ, 2010ರಿಂದ ಪಶ್ಚಿಮ ಬಂಗಾಳದಲ್ಲಿ ವಿವಿಧ ಜಾತಿಗಳಿಗೆ ನೀಡಲಾಗಿದ್ದ ಇತರೆ ಹಿಂದುಳಿದ ವರ್ಗಗಳ ಮಾನ್ಯತೆಯನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್, ಸಾರ್ವಜನಿಕ ಉದ್ಯಮಗಳು ಮತ್ತು ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿನ ಈ ಮೀಸಲಾತಿ ಕಾನೂನು ಬಾಹಿರ ಎಂದು ಘೋಷಿಸಿತ್ತು.