ವಿಧಾನ ಪರಿಷತ್ ಉಪ ಚುನಾವಣೆ: ಒಟ್ಟು 5 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Update: 2024-10-03 12:26 GMT

ಮಂಗಳೂರು, ಅ.3: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ನ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಗುರುವಾರ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಎಸ್‌ಡಿಪಿಐ ಅಭ್ಯರ್ಥಿಯಾಗಿ ಅನ್ವರ್ ಸಾದತ್, ಎಸ್‌ಡಿಪಿಐನಿಂದ ಪಕ್ಷೇತರ ಅಭ್ಯರ್ಥಿಯಾಗಿ ಮುಹಮ್ಮದ್ ರಿಯಾಝ್ ಅವರು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರಿಗೆ ನಾಮಪತ್ರ ಸಲ್ಲಿಸಿದರು.

ಈಗಾಗಲೇ ದಿನಕರ ಉಳ್ಳಾಲ ನಾಮಪತ್ರ ನಾಮಪತ್ರ ಸಲ್ಲಿಸಿದ್ದು, ಒಟ್ಟು ಐದು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.

ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಹಾಗೂ ರಾಜು ಪುಜಾರಿ ತಲಾ 2 ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಿಶೋರ್ ಕುಮಾರ್ ನಾಮಪತ್ರ ಸಲ್ಲಿಕೆ ವೇಳೆ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಪ್ರತಾಪ್‌ಸಿಂಹ ನಾಯಕ್, ಯಶಪಾಲ್ ಸುವರ್ಣ, ಸತೀಶ್ ಕುಂಪಲ, ಕಿಶೋರ್ ಕುಂದಾಪುರ, ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.

ಕಾಂಗ್ರೆಸ್‌ನ ರಾಜುಪೂಜಾರಿ ನಾಮಪತ್ರ ಸಲ್ಲಿಕೆ ವೇಳೆ ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ, ಮಂಜುನಾಥ ಭಂಡಾರಿ, ಐವನ್ ಡಿಸೋಜ ಭಾಗವಹಿಸಿದ್ದರು.

ಬಡ ಕೃಷಿಕ ಕುಟುಂಬದಲ್ಲಿ ಹುಟ್ಟಿದ ಸಾಮಾನ್ಯ ಕಾರ್ಯಕರ್ತನಾದ ನನಗೆ ಪಕ್ಷ ಇದೀಗ ದೊಡ್ಡ ಜವಾಬ್ದಾರಿ ನೀಡಿದೆ. ಹಣಬಲ, ಜಾತಿ ಬಲ ಇಲ್ಲದ ವ್ಯಕ್ತಿಗೆ ಟಿಕೆಟ್ ನೀಡಲು ಸಾಧ್ಯವಾಗುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದು ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಹೇಳಿದರು.

ನಾಮಪತ್ರ ಸಲ್ಲಿಕೆಗೆ ಮೊದಲು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ರೀತಿ ಪಕ್ಷಕ್ಕೆ ಕಪ್ಪುಚುಕ್ಕೆ ಬಾರದಂತೆ ಕಾರ್ಯ ನಿರ್ವಹಣೆ ಮಾಡುತ್ತೇನೆ. ಎಲ್ಲ ನಾಯಕರ ಅನುಭವಗಳನ್ನು ಪಡೆದುಕೊಂಡು ಕೆಲಸ ನಿರ್ವಹಿಸುವುದಾಗಿ ಭರವಸೆ ನೀಡಿದರು.

ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಪಕ್ಷ ಎಂಬುದಕ್ಕೆ ಸಾಕ್ಷಿಯಾಗಿ ಕಾರ್ಯಕರ್ತನಿಗೆ ಚುನಾವಣೆಗೆ ಸ್ಪರ್ಧಿಸುವ ಅವಕಾಶ ನೀಡಲಾಗಿದೆ. ಪಕ್ಷ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು, ಕಿಶೋರ್ ಕುಮಾರ್ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿ ದೊಡ್ಡ ಅಂತರದಿಂದ ಗೆಲ್ಲಿಸಲಿದ್ದೇವೆ ಎಂದು ಹೇಳಿದರು.

ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ರಾಜೇಶ್ ನಾಯ್ಕ್, ಯಶಪಾಲ್ ಸುವರ್ಣ, ಪ್ರತಾಪ್‌ಸಿಂಹ ನಾಯಕ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ನಂದನ್ ಮಲ್ಯ ಇದ್ದರು.

ಕಳೆದ 20 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಗ್ರಾಪಂ, ತಾ.ಪಂ. ಸದಸ್ಯನಾಗಿ, ಜಿ.ಪಂ.ನಲ್ಲಿ 2 ಬಾರಿ ಸದಸ್ಯನಾಗಿ, ಜಿಪಂ ಅಧ್ಯಕ್ಷನಾಗಿ ಸ್ಥಳೀಯ ಸಂಸ್ಥೆಗಳ ಅರಿವು ಇರುವುದರಿಂದ ಪರಿಷತ್‌ನಲ್ಲಿ ಈ ಬಗ್ಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅವಕಾಶ ದೊರೆತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಓಟು ಹಾಕುವವರು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು. ಯಾರು ಗೆದ್ದು ಬಂದರೆ ತಮಗೆ ನ್ಯಾಯ ಸಿಗಲಿದೆ ಎನ್ನುವ ಅರಿವು ಮತದಾರರಿಗೆ ಇದೆ. ಮತದಾರರ ಒಲವು ನನ್ನ ಪರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ 30 ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದು ಕೆಲಸ ಮಾಡಿದ್ದೇನೆ. ಆ ನೆಲೆಯಲ್ಲಿ ಪಕ್ಷ ನನ್ನನ್ನು ಗುರುತಿಸಿ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದೆ ಎಂದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News