ಮೇ 5ರಿಂದ ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು, ಎ. 29: ರಾಜ್ಯ ಸರಕಾರ ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ನ್ಯಾ. ಡಾ. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ನೇಮಕ ಮಾಡಿ, ಪರಿಶಿಷ್ಟ ಜಾತಿಗಳ ದತ್ತಾಂಶಗಳನ್ನು ಸಂಗ್ರಹಿಸಲು ಸಮೀಕ್ಷೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ದ.ಕ. ಜಿಲ್ಲೆಯಲ್ಲಿ ಮೇ 5ರಿಂದ 17ರವರೆಗೆ ಪ್ರಥಮ ಹಂತದಲ್ಲಿ ಈ ಕಾರ್ಯಕ್ಕಾಗಿ ನಿಯೋಜಿತ ಶಿಕ್ಷಕರಿಂದ ದತ್ತಾಂಶ ಸಂಗ್ರಹ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು, ಸಂವಿಧಾನದ 341ನೆ ವಿಧಿಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಸಮೀಕ್ಷೆಯ ವೇಳೆ ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಕುರಿತು ಅಂಕಿ ಅಂಶ ಸಂಗ್ರಹಿಸಲಾಗುತ್ತದೆ ಎಂದು ಅವರು ಹೇಳಿದರು.
ತಾಲೂಕು ಮಟ್ಟದಲ್ಲಿ ಮಾಸ್ಟರ್ ತರಬೇತುದಾರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ ನೀಡಲಾಗಿದ್ದು, ಇವರು ನಿಗದಿತ ಅವಧಿಯಲ್ಲಿ ನಿಖರ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ.
ಮತದಾರರ ಪಟ್ಟಿಯಲ್ಲಿರುವ ಮನೆಗಳ ಆಧಾರದ ಮೇಲೆ ಸಮೀಕ್ಷಾ ಕಾರ್ಯ ನಡೆಸಬೇಕಿದೆ. ಸಮೀಕ್ಷೆ ದಾರರು ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆಯ ಅಪ್ಲಿಕೇಶನ್‌ಗೆ ಲಾಗಿನ್ ಆಗಿ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಒಟಿಪಿ ನಮೂದಿಸಿ 42 ವಿವಿಧ ಮಾಹಿತಿಗಳನ್ನು, ಕುಟುಂಬ ಸದಸ್ಯರ ಸ್ವಯಂ ಘೋಷಿತ ವಿವರಗಳನ್ನು ದಾಖಲಿಸಿಕೊಳ್ಳಲಿದ್ದಾರೆ.
ದ್ವಿತೀಯ ಹಂತದಲ್ಲಿ ಮೇ 19ರಿಂದ 21ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳನ್ನು ಏರ್ಪಡಿಸಿ ಮಾಹಿತಿ ನೀಡಲು ಅವಕಾಶ ನೀಡಲಾಗುತ್ತದೆ. ಮೊದಲ ಎರಡೂ ಹಂತಗಳಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಬಾಕಿಯಾದವರು ಮೂರನೆ ಹಂತದಲ್ಲಿ ಮೇ 19ರಿದಂ 21ರವರೆಗೆ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಂಡು ಸಮೀಕ್ಷೆಗೆ ಮಾಹಿತಿ ಒದಗಿಸಬಹುದು. ಇದಕ್ಕಾಗಿ ಅವರು ಆಧಾರ್ ಸಂಖ್ಯೆ ಮತ್ತು ಜಾತಿ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆ ನೀಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಗೋಷ್ಟಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್, ಸಮಾಜ ಕಲ್ಯಾಣ ಇಲಾಖೆಯ ದ.ಕ. ಜಿಲ್ಲಾ ಉಪ ನಿರ್ದೇಶಕಿ ಡಾ. ಹೇಮಲತಾ ಉಪಸ್ಥಿತರಿದ್ದರು.
ದ.ಕ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆಗಾಗಿ ಒಟ್ಟು 2046 ಶಿಕ್ಷಕರಿಗೆ ತರಬೇತಿ ನೀಡಿ ದತ್ತಾಂಶ ಸಂಗ್ರಹ ಕಾರ್ಯಕ್ಕೆ ನೇಮಕ ಮಾಡಲಾಗಿದೆ. ಸಮೀಕ್ಷೆಗಾಗಿ ಪ್ರತಿ 10ರಿಂದ 12 ಸಮೀಕ್ಷೆ ಬ್ಲಾಕಂಗಳಿಗೆ ಓರ್ವ ಮೇಲ್ವಿಚಾರಕರಂತೆ ಒಟ್ಟು 170 ಸಮೀಕ್ಷೆ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರು ಈ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮನವಿ ಮಾಡಿದರು.