ದ.ಕ.ಜಿಲ್ಲೆಯಲ್ಲಿ ನೀಟ್ ಪರೀಕ್ಷೆಗೆ 9,080 ವಿದ್ಯಾರ್ಥಿಗಳ ನೋಂದಣಿ

ಮಂಗಳೂರು: ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಮೇಯಲ್ಲಿ ನಡೆಯಲಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮಿತಿ ಸಭೆಯು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ.ಜಿಪಂ ಸಿಇಒ ಡಾ. ಆನಂದ್ ಕೆ. ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಮಾತ್ರ ನೀಟ್ ಪರೀಕ್ಷಾ ಕೇಂದ್ರಗಳಿವೆ. ಮೇ4ರಂದು ನೀಟ್ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ತಯಾರಿಸಿ ಪರೀಕ್ಷಾ ಕೇಂದ್ರಗಳ ಕೊಠಡಿಯಲ್ಲಿ ಸಿ.ಸಿ ಕ್ಯಾಮೆರಾ ಹಾಗೂ ಪೀಠೋಪಕರಣದ ವ್ಯವಸ್ಥೆಯನ್ನು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮಾರ್ಗಸೂಚಿಯ ಅನ್ವಯ ಕಟ್ಟುನಿಟ್ಟಿನ ಸಿದ್ಧತೆಗಳನ್ನು ಕೈಗೊಳ್ಳಲು ಡಾ. ಆನಂದ್ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್ ಮಾತನಾಡಿ ಮೇ4ರಂದು ನಡೆಯುವ ನೀಟ್ ಪರೀಕ್ಷೆಗೆ ಜಿಲ್ಲೆಯಲ್ಲಿ 21 ಪರೀಕ್ಷಾ ಕೇಂದ್ರಗಳಿದೆ. 9,080 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.
ನೀಟ್ ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಅಭ್ಯರ್ಥಿಗಳ ತಪಾಸಣೆ ಸೇರಿದಂತೆ ವಿವಿಧ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.