ಐವನ್ ಡಿಸೋಜ ವಿರುದ್ಧ ಬಿಜೆಪಿ ಯುವಮೋರ್ಚಾದಿಂದ ಪೊಲೀಸರಿಗೆ ದೂರು

Update: 2024-08-19 17:28 GMT

 ಐವನ್ ಡಿಸೋಜ

ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಮೋರ್ಚಾದ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಂಗಳೂರಿನ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯ ವೇಳೆ ಐವನ್ ಡಿ ಸೋಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂದಿರುವ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲ ತಾವರ್‌ ಚಂದ್ ಗೆಹ್ಲೋತ್ ಅವರು ತನಿಖೆ ನಡೆಸಲು ಅನುಮತಿ ನೀಡಿರುವುದನ್ನು ಖಂಡಿಸಿ ಪ್ರತಿಭಟನೆಯ ವೇಳೆ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸಿ, ಕಾಂಗ್ರೆಸ್ ಕಾರ್ಯಕರ್ತರಿಗೆ ದಂಗೆ ಏಳುವಂತೆ ಮಾಡಿದ್ದಾರೆ. ಸಾರ್ವಜನಿಕ ಸೊತ್ತಿಗೂ ಹಾನಿಯನ್ನುಂಟು ಮಾಡಲು ಕಾರಣರಾಗಿದ್ದರೆ. ರಾಜ್ಯಪಾಲರನ್ನು ರಾಷ್ಟ್ರಪತಿ ಹಿಂದಕ್ಕೆ ಕರೆಸಬೇಕು. ಬಾಂಗ್ಲಾದೇಶದ ಅಧ್ಯಕ್ಷರು ರಾತ್ರೋರಾತ್ರಿ ಓಡಿ ಹೋದಂತೆ ಇಲ್ಲಿಯೂ ರಾಜ್ಯಪಾಲರು ರಾತ್ರೋರಾತ್ರಿ ಓಡಿ ಹೋಗುವಂತೆ ಮಾಡುತ್ತೇವೆ ಎಂದು ಐವನ್ ಡಿಸೋಜ ಹೇಳಿಕೆ ನೀಡಿರುವುದಾಗಿ ಆರೋಪಿಸಲಾಗಿದೆ.

ದೇಶ ಮತ್ತು ಸಂವಿಧಾನ ವಿರುದ್ಧ ಹೇಳಿಕೆ ನೀಡಿರುವ , ಐವನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 152ರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸೂಕ್ತ ಕಲಂನಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ನಂದನ್ ಮಲ್ಯ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News