ವಿಧಾನ ಪರಿಷತ್‌ನ 6 ಸ್ಥಾನಗಳಲ್ಲೂ ಕಾಂಗ್ರೆಸ್‌ಗೆ ಜಯ ಖಚಿತ: ಸಲೀಮ್ ಅಹಮದ್

Update: 2024-05-26 10:35 GMT

ಮಂಗಳೂರು, ಮೇ 26: ಕರ್ನಾಟಕದ ವಿಧಾನ ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಆರರಲ್ಲಿ ಆರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿರುವರು ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದ್ದಾರೆ.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ವಿಧಾನ ಪರಿಷತ್ ಸದಸ್ಯರಾಗಿದ್ದವರು ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಮಂಜುನಾಥ್ ಕಳೆದ ಬಾರಿ ಕಡಿಮೆ ಮತಗಳಿಂದ ಸೋತವರು. ಹೀಗಾಗಿ ಇಬ್ಬರೂ ಸುಲಭವಾಗಿ ಜಯಗಳಿಸಲಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಳೆದ ಒಂದು ವರ್ಷದ ಅವಧಿಯಲ್ಲಿ ನುಡಿದಂತೆ ನಡೆದಿದೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಯುವಜನರ ಮತ್ತು ಶಿಕ್ಷಕರಿಗೆ ಅನುಕೂಲವಾದ ಯೋಜನೆಗಳನ್ನು ಜಾರಿಗೊಳಿಸಿದೆ. ಶಿಕ್ಷಕರ ಅನೇಕ ಬೇಡಿಕೆಗಳನ್ನು ಈಡೇರಿಸಿದೆ ಎಂದು ಹೇಳಿದರು.

ದೇಶದಲ್ಲಿ ಬಿಜೆಪಿ ಬಗ್ಗೆ ಜನರು ಭ್ರಮನಿರಸನಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಪರ ಚಿಂತನೆ ನಡೆಸದೆ ಸಮಾಜವನ್ನು ಒಡೆದು ಆಳುವ ಮಾತುಗಳನ್ನಾಡುತ್ತಿದ್ದಾರೆ. ಅವರು ಮತ್ತೆ ಪ್ರಧಾನಿಯಾಗುವುದಿಲ್ಲ. ಬಿಜೆಪಿಗೆ ಬಹುಮತ ದೊರೆಯುವುದಿಲ್ಲ. ಕಾಂಗ್ರೆಸ್ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ರಾಹುಲ್ ಗಾಂಧಿ ಮುಂದಿನ ಪ್ರಧಾನಿಯಾಗಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 28 ಲೋಕಸಭಾ ಕ್ಷೇತ್ರಗಳ ಪೈಕಿ 20ರಲ್ಲಿ ಜಯ ಗಳಿಸಲಿದೆ ಎಂದರು.

ಶಿಕ್ಷಕರ ಪ್ರಮುಖ ಬೇಡಿಕೆಯಾಗಿರುವ ಹಳೆ ಪಿಂಚಣಿ ವ್ಯವಸ್ಥೆಯನ್ನು ರಾಜ್ಯ ಸರಕಾರ ಜಾರಿಗೊಳಿಸಲು ಬದ್ಧವಾಗಿದೆ. ಈಗಾಗಲೇ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಅನುಮೋದನೆಗೆ ಕಳುಹಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಧಾನ ಪರಿಷತ್ ಸದಸ್ಯ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ ಮತ್ತು ಅಶ್ರಫ್ ಕೆ, ಪಕ್ಷದ ಧುರೀಣರಾದ ಎಂ . ಎ. ಗಫೂರ್, ಶಾಲೆಟ್ ಪಿಂಟೊ, ಸದಾಶಿವ ಉಳ್ಳಾಲ್, ಆರಿಫ್ ಬಾವಾ, ತೇಜಸ್ವಿರಾಜ್, ದಿನೇಶ್ ಆಳ್ವ, ನಝೀರ್ ಬಜಾಲ್, ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News