ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲು

Update: 2023-10-18 04:39 GMT

ಬೆಳ್ತಂಗಡಿ, ಅ.18: ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗ ಒತ್ತುವರಿ ಮಾಡಿ ನಿರ್ಮಿಸುತ್ತಿದ್ದ ಮನೆಯನ್ನು ತೆರವುಗೊಳಿಸಲು ತೆರಳಿದ್ದ ಉಪ್ಪಿನಂಗಡಿ ಅರಣ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನ ಅನ್ವಯ ಶಾಸಕ ಹರೀಶ್ ಪೂಂಜಾ ವಿರುದ್ಧ ಐಪಿಸಿ 1860(U/s -143,353,504,149) ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನ ಸಾರಾಂಶ: ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಸರ್ವೇ ನಂಬ್ರ 309ರಲ್ಲಿ ಲೋಲಾಕ್ಷ ಗೌಡ ಎಂಬವರು ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಣ ಮಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆಯಂತೆ ಅ.9ರಂದು ಬೆಳಗ್ಗೆ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ್ದೆ. ಈ ವೇಳೆ ಲೋಲಾಕ್ಷ ಗೌಡ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಿಸಲು ಫೌಂಡೇಶನ್ ಹಾಕಿರುವುದು ಕಂಡುಬಂದಿತ್ತು. ಕೂಡಲೇ ನಿವೇಶನವನ್ನು ತೆರವು ಮಾಡುವಂತೆ ಲೋಲಾಕ್ಷ ಗೌಡರಿಗೆ ಸೂಚಿಸಿದೆವು. ಆದರೆ ಅವರು ತೆರವುಗೊಳಿಸದ ಕಾರಣ ಮನೆ ಫೌಂಡೇಶನನ್ನು ಅರಣ್ಯ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿ ಮುಖಾಂತರ ತೆರವುಗೊಳಿಸಲು ಮುಂದಾದೆವು. ಆ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ, ಅದನ್ನು ತಡೆದರು. ಅಲ್ಲದೆ ಅಧಿಕಾರಿಗಳ ಸಮ್ಮುಖದಲ್ಲಿ ಉಪ್ಪಿನಂಗಡಿ ಅರಣ್ಯಾಧಿಕಾರಿಯಾಗಿರುವ ತನ್ನನ್ನು ಅವಾಚ್ಯ ಪದ ಬಳಸಿ ನಿಂದಿಸಿದ್ದಲ್ಲದೆ, ನಿವೇಶನವನ್ನು ತೆರವುಗೊಳಿಸಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು. ಆದುದರಿಂದ ಅರಣ್ಯ ಇಲಾಖಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಉಪ್ಪಿನಂಗಡಿ ಅರಣ್ಯಾಧಿಕಾರಿಯಾಗಿರುವ ತನ್ನನ್ನು  ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಅವರ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಅ.13ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈ ದೂರಿನ ಅನ್ವಯ ಶಾಸಕ ಹರೀಶ್ ಪೂಂಜಾ ವಿರುದ್ಧ ಐಪಿಸಿ 1860(U/s -143,353,504,149) ಅಡಿಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಯ ವಿವರ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕದ ಅರಣ್ಯ ಇಲಾಖೆಗೆ ಸೇರಿದ ಮೀಸಲು ಅರಣ್ಯ ಪ್ರದೇಶದ ಜಾಗದಲ್ಲಿ ಲೋಲಾಕ್ಷ ಎಂಬವರು ಅಕ್ರಮವಾಗಿ ಮನೆ ನಿರ್ಮಿಸಲು ಪಂಚಾಂಗ ನಿರ್ಮಿಸಿದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅ.6ರಂದು ಇದನ್ನು ತೆರವುಗೊಳಿಸಿತ್ತು ಈ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅ.7ರಂದು ಸ್ಥಳಕ್ಕೆ ತೆರಳಿ ಸ್ಥಳೀಯರ ಸಹಕಾರದಲ್ಲಿ ತಾತ್ಕಾಲಿಕ ಮನೆ ನಿರ್ಮಿಸಿ ಗೃಹಪ್ರವೇಶ ಮಾಡಿ ಹೋಗಿದ್ದರು. ಅರಣ್ಯ ಇಲಾಖೆ ಅ.9ರಂದು ಆ ಮನೆಯನ್ನೂ ತೆರವಿಗೆ ಮುಂದಾಗಿತ್ತು. ಈ ವೇಳೆ ದ.ಕ. ಜಿಲ್ಲೆಯ ಬಿಜೆಪಿ ಶಾಸಕರೊಂದಿಗೆ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಪ್ಪಿನಂಗಡಿ ಅರಣ್ಯ ಇಲಾಖೆಯ ಕಾರ್ಯಾಚರಣೆಯನ್ನು ವಿರೋಧಿಸಿದ್ದರು. ಅಲ್ಲದೆ, ತೆರವಿಗೆ ಅಡ್ಡಿಪಡಿಸಿದ್ದರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ.ಗೆ ಅವಾಚ್ಯ ಶಬ್ದದಿಂದ ನಿಂದಿಸಿ ಬೆದರಿಕೆ ಹಾಕಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಬಳಿಕ ಈ ಘಟನೆ ಬಗ್ಗೆ ಅರಣ್ಯಾಧಿಕಾರಿಗಳು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News