ಮಂಗಳೂರು ವಿವಿಯ ವಿಶ್ರಾಂತ ಉಪ ಕುಲಪತಿ ಪ್ರೊ.ಕೆ.ಬೈರಪ್ಪ ನಿಧನ

Update: 2023-07-31 04:57 GMT

ಮಂಗಳೂರು, ಜು.31: ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ(69) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದರು.

ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲೆಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ಅವರು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

ಪ್ರೊ.ಕೆ.ಬೈರಪ್ಪ ಅವರು 2014ರ ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಎಂಟನೇ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ಬಳಿಕ ಅವರು ಆದಿಚುಂಚಗಿರಿ ವಿವಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೂಲತಃ ಮೈಸೂರಿನವರಾದ ಪ್ರೊ.ಬೈರಪ್ಪ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್ಸಿ ಹಾಗೂ ರಶ್ಯದ ಮಾಸ್ಕೋ ಸ್ಟೇಟ್ ಯುನಿವರ್ಸಿಟಿಯಿಂದ ಪಿ.ಎಚ್.ಡಿ. ಪದವಿಯನ್ನು ಪಡೆದು, ಮೈಸೂರು ವಿವಿಯಲ್ಲಿ ಪ್ರಾಧ್ಯಾಪಕರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2017-18ರ ಅವಧಿಯಲ್ಲಿ ಸರ್ ಸಿ.ವಿ.ರಾಮನ್ ಜನ್ಮ ಶತಮಾನೋತ್ಸವ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.

ಮೃತರು, ಪತ್ನಿ, ಇಬ್ಬರು ಪುತ್ರರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News