ಸುರತ್ಕಲ್| ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

Update: 2024-10-22 17:45 GMT

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸೂರಜ್ ಇಂಟರ್ ನ್ಯಾಷನಲ್‌ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಮೃತರನ್ನು ಮುಕ್ಕ ಯೂನಿಯನ್ ಬ್ಯಾಂಕ್ ಸಿಬ್ಬಂದಿ, ಮುಕ್ಕ ಚೆಕ್ ಪೋಸ್ಟ್ ಬಳಿಯ ನಿವಾಸಿ ರವಿ ಎಂದು ತಿಳಿದು ಬಂದಿದೆ.

ರವಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಪತ್ನಿಯನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಪತ್ನಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಆಟೊ ರಿಕ್ಷಾದಲ್ಲಿ ಕಳುಹಿಸಿದ್ದ ಅವರು ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.

ಸೂರಜ್ ಇಂಟರ್ ನ್ಯಾಷನಲ್ ಬಳಿ ರಾಷ್ಟ್ರಿಯ ಹೆದ್ದಾರಿ ಸಮೀಪ ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.

ಘಟನೆಯಲ್ಲಿ ರವಿ ಅವರ ಕಾಲು ಮುರಿತಕ್ಕೊಳಗಾಗಿದ್ದು, ಎದೆಗೆ ಗಂಭೀರ ಗಾಯಗಳಾಗಿತ್ತು ಎನ್ನಲಾಗಿದೆ. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ವಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಅವರು ಮೃತಪಟ್ಟರೆಂದು ತಿಳಿದು ಬಂದಿದೆ‌.

ಘಟನೆಗೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ‌.


Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News