ಮಂಗಳೂರು: ಮಾದಕ ವಸ್ತು ಸಾಗಾಟ, ಮಾರಾಟ ಆರೋಪ; ಇಬ್ಬರ ಬಂಧನ

Update: 2024-08-28 15:28 GMT

ಮಂಗಳೂರು: ಮಾದಕ ವಸ್ತು ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.

ಮಂಜೇಶ್ವರದ ಪುಚ್ಚಿತ್‌ಬೈಲ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೆ ಸಲಾಂ(30) ಮತ್ತು ಸೂರಜ್ ರೈ ಯಾನೆ ಅಂಕಿ(26) ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳಿಂದ 75,000 ರೂ. ಮೌಲ್ಯದ 15 ಗ್ರಾಂ ಎಂಡಿಎಂಎ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕಮಾಪಕ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,65,000 ಆಗಬಹುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

ಆರೋಪಿಗಳು ಎಂಡಿಎಂಎನ್ನು ದ್ವಿಚಕ್ರ ವಾಹನದಲ್ಲಿಟ್ಟುಕೊಂಡು ಮಂಗಳೂರು ನಗರಕ್ಕೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ತಲಪಾಡಿ ಕೆ ಸಿ ರೋಡ್ ಬಳಿ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳ ಪೈಕಿ ಅಬ್ದುಲ್ ಸಲಾಂ ಎಂಬಾತನ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಮತ್ತು ಇನ್ನೊಬ್ಬ ಆರೋಪಿ ಸೂರಜ್ ರೈ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಕೇರಳದಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ನಗರ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News