ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್‌ಗಳ ಬಂಧನ

Update: 2023-08-27 15:46 GMT

ಮಂಗಳೂರು, ಆ.27: ಮಾದಕ ವಸ್ತು ‘ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್‌ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು 8ನೆ ಬ್ಲಾಕ್‌ನ ನಿಸಾರ್ ಹುಸೈನ್ ಯಾನೆ ನಿಚ್ಚು (34) ಬಂಧಿತ ಆರೋಪಿಗಳು.

ಇವರಿಂದ ಒಟ್ಟು 52 ಗ್ರಾಂ ತೂಕದ 2,60,000 ರೂ.ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, 2 ಮೊಬೈಲ್ ಫೋನು, ನಗದು 1,800 ರೂ., ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 7,83,300 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ ಕಾರಿನಲ್ಲಿ ಇಬ್ಬರು ಅಕ್ರಮವಾಗಿ ಮಾದಕ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ.

ಆರೋಪಿಗಳ ಪೈಕಿ ಶಾಕೀಬ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೂರು ಕಳವು ಪ್ರಕರಣಗಳು, ಕೊಲೆ ಯತ್ನ ಪ್ರಕರಣ, ಹಲ್ಲೆ ಪ್ರಕರಣ, ಬಜ್ಪೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಬಂದರ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ, ಮೂಡುಬಿದಿರೆ ಠಾಣೆಯಲ್ಲಿ ಸರ ಕಳ್ಳತನ ಪ್ರಕರಣ, ಕಾರ್ಕಳ ನಗರ ಠಾಣೆ, ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವಾ ಠಾಣೆಗಳಲ್ಲಿ ಸರಕಳ್ಳತನ ಪ್ರಕರಣ, ಮಣಿಪಾಲದಲ್ಲಿ ದರೋಡೆ ಪ್ರಕರಣ ಹೀಗೆ ಒಟ್ಟು 13 ಪ್ರಕರಣಗಳು ದಾಖಲಾಗಿವೆ.

ನ್ಯಾಯಾಲಯದಿಂದ ಜಾಮೀನ ಮೇಲೆ ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹಾಗಾಗಿ ಈತನ ವಿರುದ್ಧ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು.

ನಿಸಾರ್ ಹುಸೈನ್ ನಿಚ್ಚು ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಕೊಲೆಯತ್ನ ಪ್ರಕರಣ, ಬರ್ಕೆ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಹಾಗೂ ಕೊಲೆಯತ್ನ ಪ್ರಕರಣ, ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ, ಕದ್ರಿ ಠಾಣೆ, ಉಪ್ಪಿನಂಗಡಿ, ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ನಡೆಸಿದ 3 ಪ್ರಕರಣಗಳು, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಹೀಗೆ 9 ಪ್ರಕರಣಗಳು ದಾಖಲಾಗಿದೆ.

ಈ ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 7 ವಾರಂಟ್ ಜಾರಿಯಲ್ಲಿದೆ. ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಕೂಡಾ ಈತ ಭಾಗಿಯಾಗಿದ್ದು, ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ., ಎಸ್ಸೈಗಳಾದ ರಾಜೇಂದ್ರ ಬಿ., ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News