ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳ ಬಂಧನ

Update: 2024-09-06 16:36 GMT

ಮಂಗಳೂರು, ಸೆ.6: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ ತಲೆಮರೆಸಿಕೊಂಡಿದ್ದ ನಾಲ್ಕು ಮಂದಿ ವಾರಂಟ್ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆಯತ್ನ, ದನ ಕಳ್ಳತನ ಪ್ರಕರಣ ಹಾಗೂ ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮೂಲತಃ ವಳಚ್ಚಿಲ್‌ನ ಪ್ರಸಕ್ತ ಕುದ್ರೋಳಿಯಲ್ಲಿ ವಾಸವಾಗಿದ್ದ ಮುನಾವರ್ ಮುಸ್ತಾಕ್ ಯಾನೆ ಮುನ್ನ (40) ಎಂಬಾತನನ್ನು ಬಂಧಿಸಿದ್ದಾರೆ.

ಕೊಣಾಜೆ, ಉಳ್ಳಾಲ, ಕಂಕನಾಡಿ ನಗರ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಚೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದಲ್ಲದೆ, ಕೊಲೆಯತ್ನ ಸಹಿತ 9 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಅಡ್ಯಾರ್‌ನ  ರಫೀಝ್ ಯಾನೆ ಹಫೀಝ್ ಯಾನೆ ಅಫ್ರಿದ್ (23) ಎಂಬಾತನನ್ನು ಬಂಧಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ, ಕೊಲೆಯತ್ನ, ಕೊಲೆ, ವಂಚನೆ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ 6 ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೋಟೆಕಾರ್ ಗ್ರಾಮದ ಶಾಂತಿಬಾಗ್‌ನ  ನೌಫಾಲ್ (32) ಎಂಬಾತನನ್ನು ಬಂಧಿಸಿದ್ದಾರೆ.

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಸಬಾ ಬೆಂಗರೆಯ ನೌಷಾದ್ ಯಾನೆ ಬುಲೆಟ್ ನೌಷಾದ್ ಪಣಂಬೂರು ಬಂಧಿಸಿದ್ದಾರೆ.

ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ಪಣಂಬೂರು, ಕೊಣಾಜೆ ಹಾಗೂ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿ ಸಲಾಗಿದೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್ ಮತ್ತಿತರರು ಪಾಲ್ಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News