ಮಂಗಳೂರು: ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ನಾಲ್ವರ ಸೆರೆ

Update: 2023-08-15 16:21 GMT

ಮಂಗಳೂರು: ‘‘ಡ್ರಗ್ಸ್ ಫ್ರಿ ಮಂಗಳೂರು’’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ MDMA ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ದಸ್ತಗಿರಿ ಮಾಡಿ ಒಟ್ಟು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ.

ಬೆಂಗಳೂರಿನಿಂದ ಎಂಡಿಎಂ ಮಾದಕ ವಸ್ತುವನ್ನು ಖರೀದಿಸಿಕೊಂಡು ಮಂಗಳೂರು ನಗರದ ಉತ್ತರ ಠಾಣಾ ವ್ಯಾಪ್ತಿಯ ಫಳ್ನೀರ್ ಪರಿಸರದಲ್ಲಿ ಕಾರಿನಲ್ಲಿ ಮೂವರು ವ್ಯಕ್ತಿಗಳು ಸೇರಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ಅವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತುವನ್ನು ಹೊಂದಿದ್ದ ಆರೋಪದಲ್ಲಿ ಮಂಜೇಶ್ವರ ಉದ್ಯಾವರದ ಮೊಹಮ್ಮದ್ ಹನೀಫ್ ಎ.ಎನ್(47) ಹಾಗೂ ಸೈಯದ್ ಫೌಝಾನ್(30), ಕುಂಜತ್ತೂರಿನ ಸಿರಾಜುದ್ದೀನ್ ಅಬೂಬಕರ್(35) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಒಟ್ಟು 100 ಗ್ರಾಂ ತೂಕದ ರೂ. 5,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 4000, ಕಾರು-1, ಮೊಬೈಲ್ ಫೋನುಗಳು-3, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 10,94,500 ರೂ. ಆಗಬಹುದು. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮಂಗಳೂರು ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೊಬ್ಬನು ಅಕ್ರಮವಾಗಿ ಮಾದಕ ವಸ್ತು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವನ್ನು ಹೊಂದಿದ್ದ ಮಂಜೇಶ್ವರ ಮಿಯಾಪದವಿನ ಇಬ್ರಾಹಿಂ ಅರ್ಷಾದ್ ವಿ.ಕೆ(30) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಒಟ್ಟು 100 ಗ್ರಾಂ ತೂಕದ ರೂ. 5,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 1000, ಮೊಬೈಲ್ ಫೋನುಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿ ಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 5,11,500 ಆಗಬಹುದು. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿ ಇಬ್ರಾಹೀಂ ಹರ್ಷಾದ್ ಎಂಬಾತನ ವಿರುದ್ಧ ಈ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 175 ಕೆಜಿ ಗಾಂಜಾ ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ಹಾಗೂ ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News